ಸುಳ್ಯ(ದಕ್ಷಿಣ ಕನ್ನಡ): ಏ.30 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯಕ್ಕೆ ಆಗಮಿಸಲಿದ್ದಾರೆ. ನಾಳೆ ಸಂಜೆ 4.30ಕ್ಕೆ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಪಕ್ಷದ ಪರ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಅಲ್ಲದೇ ಕಳೆದ ವರ್ಷ ಹತ್ಯೆಯಾದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೂ ನಡ್ಡಾ ಭೇಟಿ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಬಿಜೆಪಿ ಮೂಲಗಳು ಖಚಿತಪಡಿಸಿವೆ.
ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು ಭಾಗಿ: ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ. ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆ ಆರಂಭಗೊಂಡಿದೆ. ಸಮಾವೇಶದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಪಕ್ಷದ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.
ಇದನ್ನೂ ಓದಿ: ಶಿಡ್ಲಘಟ್ಟ, ಹೊಸಕೋಟೆಯಲ್ಲಿ ಜೆ.ಪಿ ನಡ್ಡಾ ಮೆಗಾ ರೋಡ್ ಶೋ.. ಅಭ್ಯರ್ಥಿಗಳ ಪರ ಮತಬೇಟೆ
ನಡ್ಡಾ ರೋಡ್ ಶೋ: ರಾಜ್ಯ ಚುನಾವಣಾ ಪ್ರಚಾರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಎಂಟ್ರಿ ಕೊಟ್ಟಿದ್ದಾರೆ. ಶಿಡ್ಲಘಟ್ಟ, ಹೊಸಕೋಟೆ ಹಾಗೂ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ.
ಇದನ್ನೂ ಓದಿ: ಏ. 27ಕ್ಕೆ ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶ: ಆಮಂತ್ರಣ ಪತ್ರಿಕೆ ಬಿಡುಗಡೆ
ಪ್ರವೀಣ್ ನೆಟ್ಟಾರು ಪ್ರತಿಮೆ ಅನಾವರಣ: ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ಬಿಜೆಪಿ ಪಕ್ಷದ ವತಿಯಿಂದ ನಿರ್ಮಿಸಿದ ನೂತನ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ಏ.27ರಂದು ನೆರವೇರಿದೆ. ಸ್ವಾಮೀಜಿಗಳು, ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರದ ಪ್ರಮುಖರು ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದ್ದರು. ನೂತನ ಮನೆಯ ಸಮೀಪದಲ್ಲಿ ನಿರ್ಮಿಸಿರುವ ಪ್ರವೀಣ್ ನೆಟ್ಟಾರು ಪ್ರತಿಮೆಯನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟನೆ ಮಾಡಿದ್ದರು. 2700 ಚದರ್ ಅಡಿ ವಿಸ್ತೀರ್ಣದಲ್ಲಿ ಸುಮಾರು 70 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಮನೆಯನ್ನು ನಿರ್ಮಿಸಲಾಗಿದೆ. ನೂತನ ಮನೆಗೆ 'ಪ್ರವೀಣ್ ನಿಲಯ' ಎಂದು ಹೆಸರಿಡಲಾಗಿದೆ.
ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಪ್ರವೀಣ್: ಕಳೆದ ಜುಲೈ ತಿಂಗಳಿನಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್(32) ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದರು. ಬಿಜೆಪಿ ಯುವ ನಾಯಕನಾಗಿದ್ದ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲೀಕರಾಗಿದ್ದರು.
ಇದನ್ನೂ ಓದಿ: ನೆಟ್ಟಾರು ಕುಟುಂಬಕ್ಕೆ ನಿರ್ಮಿಸಿದ ಮನೆಯ ಗೃಹ ಪ್ರವೇಶ: ಪ್ರವೀಣ್ ನೆಟ್ಟಾರು ಪ್ರತಿಮೆ ಅನಾವರಣ