ಮಂಗಳೂರು: ಡ್ರಗ್ಸ್ ದಂಧೆಯ ಬಗ್ಗೆ ಎಲ್ಲ ರೀತಿಯ ಆಯಾಮಗಳಲ್ಲೂ ವಿಚಾರಣೆ, ತನಿಖೆ ನಡೆಸಲಾಗುತ್ತಿದೆ. ಈ ಸಂದರ್ಭ ಯಾರಾದರೂ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ನಮಗೆ ತಿಳಿದು ಬಂದಲ್ಲಿ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹೇಳಿದರು.
ಕಿಶೋರ್ ಅಮನ್ ಶೆಟ್ಟಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ನಿರೂಪಕಿ ಅನುಶ್ರೀ ಅವರ ವಿಚಾರಣೆ ನಡೆಸಬೇಕಾಗಿವುದರಿಂದ ತನಿಖಾಧಿಕಾರಿಯವರು ಇಂದು ಅವರ ವಿಚಾರಣೆಯನ್ನು ನಡೆಸಿದ್ದಾರೆ. ವಿಚಾರಣೆ ನಡೆಸಿದ ಸಂದರ್ಭದಲ್ಲಿ ಯಾವ ಪ್ರಶ್ನೆಗಳನ್ನು ಕೇಳಲಾಗಿದೆ, ಅವರೇನು ಉತ್ತರ ನೀಡಿದ್ದಾರೆ ಅನ್ನೋದನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ ಎಂದು ಹೇಳಿದರು.
ಅನುಶ್ರೀಯವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ವಿಚಾರಣೆಗೆ ಹಾಜರಾಗಿ ತನಿಖಾಧಿಕಾರಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಇಂದು ನಡೆಸಿದ ತನಿಖೆಯನ್ನು ಅವಲಂಬಿಸಿ ಮುಂದೆ ಅವರನ್ನು ಮತ್ತೆ ವಿಚಾರಣೆಗೆ ಕರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಇನ್ನು ಮಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದ್ದು, ಸದ್ಯ ಯಾವುದೇ ಆರೋಪಿಗಳನ್ನು ಬಂಧಿಸಲಾಗಿಲ್ಲ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದರು.