ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 ನ್ಯಾಯಾಲಯವು ಕಠಿಣ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.
ಬೆಳ್ತಂಗಡಿ ಶಿಬಾಜೆಯ ನವೀನ (28) ಎಂಬಾತ ಶಿಕ್ಷೆಗೆ ಒಳಗಾದ ಆರೋಪಿ. ಆರೋಪಿ ನವೀನ 2017ರಲ್ಲಿ ಮದುವೆಯಾಗುವುದಾಗಿ ನಂಬಿಸಿ ತನ್ನ ಸಂಬಂಧಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆಯನ್ನು ನಡೆಸಿದ ನ್ಯಾಯಾಧೀಶೆ ಸಾವಿತ್ರಿ ವೆಂಕಟರಮಣ ಭಟ್, 16 ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಅಲ್ಲದೆ ಈ ಪ್ರಕರಣಕ್ಕೆ ಡಿಎನ್‌ಎ ವರದಿ ಪೂರಕವಾಗಿ ಪ್ರಮುಖ ಸಾಕ್ಷಿಯಾಗಿತ್ತು. ಈ ಹಿನ್ನೆಲೆ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಐಪಿಸಿ ಕಲಂ 376ರನ್ವಯ ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ 5,000 ರೂ. ದಂಡ ಮತ್ತು ಪೊಕ್ಸೊ ಕಾಯ್ದೆಯಡಿ 10 ವರ್ಷ ಕಠಿಣ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದ ಮಂಡಿಸಿದ್ದರು.