ಮಂಗಳೂರು: ಸುರತ್ಕಲ್ನಲ್ಲಿ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುರತ್ಕಲ್ನ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿತ್ತು. ಕೃಷ್ಣಾಪುರ ನಿವಾಸಿ ಜಲೀಲ್ ಮೃತಪಟ್ಟವರು.
ಇಬ್ಬರು ದುಷ್ಕರ್ಮಿಗಳ ತಂಡ ಜಲೀಲ್ ಮೇಲೆ ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಸ್ಥಳದಿಂದ ಪರಾರಿಯಾಗಿದ್ದರು. ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್, ಅಂಗಡಿಯಲ್ಲಿದ್ದ ವೇಳೆ ಅವರ ಎದೆಯ ಭಾಗಕ್ಕೆ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಸುತ್ತಮುತ್ತಲು ಪರಿಸ್ಥಿತಿ ಬಿಗಡಾಯಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಬರುವ ಸುರತ್ಕಲ್, ಬಜಪೆ, ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಘಟನೆ ಇದೇ ಮೊದಲಲ್ಲ. ಜುಲೈ 26ರಂದು ಬೆಳ್ಳಾರೆ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ತಾವು ನಡೆಸುತ್ತಿದ್ದ ಕೋಳಿ ಅಂಗಡಿಯನ್ನು ರಾತ್ರಿ ಮುಚ್ಚುತ್ತಿದ್ದ ವೇಳೆ ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಪರಾರಿಯಾಗಿದ್ದರು.
ಜುಲೈ 28ರಂದು 24 ವರ್ಷದ ಮೊಹಮ್ಮದ್ ಫಾಜಿಲ್ ಎಂಬಾತನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.