ಮಂಗಳೂರು: ಕೋವಿಡ್-19 ಸೋಂಕು ಹರಡದಂತೆ ಸರ್ಕಾರದ ಮಾರ್ಗಸೂಚಿಯ ಅನ್ವಯ ಮುನ್ನೆಚ್ಚರಿಕೆ ವಹಿಸಿ ಗಣೇಶ ಚತುರ್ಥಿ ಆಚರಣೆ ಮಾಡುವಂತೆ ದ.ಕ.ಜಿಲ್ಲಾಧಿಕಾರಿಯವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಮನೆಯೊಳಗೆ, ದೇವಸ್ಥಾನಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ ಜನಸಂಖ್ಯೆಯಲ್ಲಿ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ನಾಲ್ಕು ಅಡಿ ಎತ್ತರ ಹಾಗೂ ಮನೆಗಳಲ್ಲಿ ಎರಡು ಅಡಿ ಎತ್ತರ ಮೀರದಂತೆ ಮೂರ್ತಿ ಪ್ರತಿಷ್ಠಾಪಿಸಬೇಕು. ಪಾರಂಪರಿಕವಾಗಿ, ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಜಿಲ್ಲಾಡಳಿತದಿಂದ ಕಡ್ಡಾಯ ಅನುಮತಿ ಪಡೆದುಕೊಳ್ಳಬೇಕು. ಅಲ್ಲದೆ ಒಂದು ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವ ನಡೆಸಲು ಪ್ರೋತ್ಸಾಹಿಸಬೇಕು.
ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ನಡೆಯುವಲ್ಲಿ 20 ಜನರಿಗೆ ಸೀಮಿತ ಆವರಣ ನಿರ್ಮಿಸಿ, ಒಮ್ಮೆಗೆ 20 ಜನರಿಗಿಂತ ಅಧಿಕ ಜನ ಸೇರಬಾರದು. ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಗಣೇಶ ಮೂರ್ತಿಯನ್ನು ತರುವಾಗ ಹಾಗೂ ವಿಸರ್ಜನೆ ಮಾಡುವಾಗ ಯಾವುದೇ ಮೆರವಣಿಗೆಗೆ ಅವಕಾಶವಿಲ್ಲ. ಮನೆಯಲ್ಲಿ ವಿಗ್ರಹ ಪ್ರತಿಷ್ಠಾಪನೆ ಮಾಡಿದವರು ವಿಸರ್ಜನೆಗೆ ಮನೆಯಲ್ಲಿಯೇ ವ್ಯವಸ್ಥೆ ಮಾಡುಕೊಳ್ಳುವುದು. ಸಾರ್ವಜನಿಕ ಸ್ಥಳಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ ಮಾಡಿದವರು, ಸಮೀಪದ ಮಾರ್ಗವನ್ನು ಬಳಸಿಕೊಂಡು ಮನಪಾ, ಜಿಲ್ಲಾಡಳಿತ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಿರ್ಮಿಸಲಾಗಿರುವ ಹೊಂಡ, ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಟ್ಯಾಂಕ್ ಗಳಲ್ಲಿ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಬೇಕು.
ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿರುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳನ್ನು ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಅಲ್ಲದೆ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಬೇಕು. ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ಕನಿಷ್ಠ 6 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಮಾಸ್ಕ್ ಧಾರಣೆ ಕಡ್ಡಾಯ. ಈ ಎಲ್ಲಾ ಅಗತ್ಯ ಕ್ರಮಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಆಯೋಜಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು.
ಸಮಾಜದಲ್ಲಿ ಕಾನೂನು ಹಾಗೂ ಸುವ್ಯವಸ್ಥೆಗೆ ಭಂಗ ಬಾರದಂತೆ ಹಬ್ಬ ಆಚರಿಸಬೇಕು. ರಾಷ್ಟ್ರೀಯ ನಿರ್ದೇಶನ ಹಾಗೂ ರಾಜ್ಯ ಸರಕಾರದ ಆದೇಶ ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.