ಮಂಗಳೂರು: ತನ್ನ ತಾಯಿಯನ್ನು ಚಿಕಿತ್ಸೆಗೆ ಕರೆದುಕೊಂಡು ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ಮಹಿಳಾ ರಿಸೆಪ್ಶನಿಸ್ಟ್ ಅವರೊಂದಿಗೆ ಅಸಭ್ಯವಾಗಿ ವರ್ತಿಸಿ, ಆಸ್ಪತ್ರೆ ಸೊತ್ತುಗಳನ್ನು ಹಾನಿ ಮಾಡಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಈ ಪ್ರಕರಣದ ಆರೋಪಿ ಕದ್ರಿ ವ್ಯಾಸನಗರ ನಿವಾಸಿ ಆಶಿಕ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಸೆ.25ರಂದು ಸಂಜೆ ಆಶಿಕ್ ತನ್ನ ತಾಯಿಯನ್ನು ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದನು. ಈ ವೇಳೆ ಆಸ್ಪತ್ರೆಯ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳಾ ಸಿಬ್ಬಂದಿಯು ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಆರೋಪಿ ಆಶೀಕ್ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ದಾಂಧಲೆ ನಡೆಸಿದ್ದಾನೆ. ಈತ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದು ಈ ಬಗ್ಗೆ ಸಂತ್ರಸ್ತೆ ಕಂಕನಾಡಿ ಠಾಣೆಗೆ ದೂರು ನೀಡಿದ್ದಾರೆ.
ಪ್ರತ್ಯೇಕ ಪ್ರಕರಣ- ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರುತ್ತಿದ್ದ ವಿದ್ಯಾರ್ಥಿ ಸೆರೆ ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿ ವಿದ್ಯಾರ್ಥಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಲುಕುಮಾನುಲ್ ಹಕೀಂ ಯಾನೆ ಹಕೀಂ(22) ಬಂಧಿತ ಆರೋಪಿ.
ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಯುವಕನೊಬ್ಬ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000 ಮೌಲ್ಯದ ಮಾದಕ ವಸ್ತು, 1 ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,60,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈತನು ಮಂಗಳೂರು ನಗರದ ಕಾಲೇಜುವೊಂದರ ಪದವಿ ವಿದ್ಯಾರ್ಥಿಯಾಗಿದ್ದು, ಈ ಮಾದಕ ವಸ್ತು ಮಾರಾಟ ದಂಧೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಬಗ್ಗೆ ಸಿಸಿಬಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ಪತ್ತೆ ಕಾರ್ಯ ಮುಂದುವರಿದಿದೆ. ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಿರಂತರ ಮುಂದುವರಿಸಿದ್ದಾರೆ.
ಇದನ್ನೂಓದಿ: ಮಂಗಳೂರು: ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿ