ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಬಾಧೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಿಲ್ಲಾಡಳಿತ ಜಾರಿಗೊಳಿಸಿರುವ ಲಾಕ್ಡೌನ್ಗೆ ಮಂಗಳೂರು ಸಂಪೂರ್ಣ ಲಾಕ್ ಆಗಿದೆ. ರಸ್ತೆಯಲ್ಲಿ ಜನ ಸಂಚಾರ ವಿರಳವಾಗಿದ್ದು, ಜನಜೀವನ ಸಂಪೂರ್ಣ ಸ್ತಬ್ಧಗೊಂಡಿದೆ.
ಮಾರ್ಗಸೂಚಿಗಳ ಪ್ರಕಾರ ಬೆಳಗ್ಗೆ 8ರಿಂದ 11ರವರೆಗೆ ಲಾಕ್ಡೌನ್ ಕೊಂಚ ಸಡಿಲಿಕೆ ಇದ್ದು, ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ ಖಾಸಗಿ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ. ಈ ಸಂದರ್ಭ ಸಾರ್ವಜನಿಕರು ತಮ್ಮ ಪರಿಸರದ ದಿನಸಿ ಅಂಗಡಿಗಳಲ್ಲಿ, ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ.
ಪೊಲೀಸರು ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದ್ದು, ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕುತ್ತಿದ್ದಾರೆ. ನಗರದ ಪ್ರಮುಖ ರಸ್ತೆಯಾದ ಸ್ಟೇಟ್ ಬ್ಯಾಂಕ್ ಪ್ರವೇಶಿಸುವಲ್ಲಿಯೂ ನಾಕಾಬಂದಿ ಹಾಕಲಾಗಿದ್ದು, ತುರ್ತು ಅಗತ್ಯ ಸೇವೆಗಳ ಸಂಬಂಧ ಸಂಚರಿಸುವವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.