ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಬಾರಿ ಚಂಪಾಷಷ್ಠಿಯನ್ನು ಯಾವ ರೀತಿಯಲ್ಲಿ ನಡೆಸಬಹುದು ಎಂಬ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್ 19 ಆತಂಕವಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು, ನಿಯಮಗಳನ್ನು ಪಾಲಿಸಿವುದರೊಂದಿಗೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ನಡೆಸುವ ಬಗ್ಗೆ ಚರ್ಚಿಸಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಧಿಕಾರಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಈ ವಾರದ ಕೊನೆಯಲ್ಲಿ ಸಭೆ ನಡೆಯಲಿದೆ. ಎಲ್ಲಾ ಸಾಧಕ, ಬಾಧಕಗಳನ್ನು ಗಮದಲ್ಲಿಟ್ಟುಕೊಂಡು ಚಂಪಾಷಷ್ಠಿ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದರು.
ದೇವಸ್ಥಾನದ ಅಭಿವೃದ್ಧಿ ಸಮಿತಿಯನ್ನು ರಚಿಸಲಾಗಿದ್ದು, ಸುಳ್ಯ ಶಾಸಕ ಎಸ್. ಅಂಗಾರ ಅವರ ನೇತೃತ್ವದಲ್ಲಿ ಸಮಿತಿ ರಚನೆಗೊಂಡಿದ್ದು, ಮುಂದಕ್ಕೆ ದೇವಸ್ಥಾನದ ಅಭಿವೃದ್ಧಿ ಕೆಲಸಗಳಿಗೆ ಅವರ ನೇತೃತ್ವದಲ್ಲಿ ಹಾಗೂ ಆಡಳಿತ ವಿಚಾರದಲ್ಲಿ ಮುಂದುವರಿಯಲು ಸಮಿತಿಗೆ ಅಧಿಕಾರ ನೀಡಲಾಗಿದೆ ಎಂದರು.
ಆಡಳಿತಾಧಿಕಾರಿ ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಕಸ್ತೂರಿ ರಂಗನ್ ವರದಿಯ ಸಾಧಕ, ಬಾಧಕಗಳ ಚರ್ಚೆಗಳು ನಡೆಯುತ್ತಿದೆ. ಈ ಭಾಗದ ಜನತೆಗೆ ಕಸ್ತೂರಿ ರಂಗನ್ ವರದಿಯಿಂದ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಸಚಿವರು ಪತ್ರಕರ್ತರ ಪ್ರಶ್ನೆಗೆ ಸಚಿವರು ಉತ್ತರಿಸಿದರು.