ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕರೆ ಹಡಿಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಪುತ್ತೂರು ತಾಲೂಕು ಪಂಚಾಯಿತಿ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳಿಂದ ಹಡಿಲು ಬಿದ್ದ ಭೂಮಿಗಳ ಗುರುತಿಸುವಿಕೆ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ಹಡಿಲು ಬಿದ್ದಿರುವ ಕಂದಾಯ ಇನ್ನಿತರ ಭೂಮಿಯನ್ನು ಗುರುತಿಸಿ ಅವುಗಳಲ್ಲಿ ಗದ್ದೆ ನಾಟಿ ಮಾಡುವ ಬಗ್ಗೆ ರೈತರಿಗೆ ಪ್ರೇರಣೆ ನೀಡುವಂತೆ ಕೃಷಿ, ತೋಟಗಾರಿಕೆ ಮತ್ತು ಕೃಷಿ ಸಂಬಂಧಿತ ಇತರ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲೆಯಲ್ಲಿ ಸುಮಾರು 5 ಸಾವಿರ ಎಕರೆ ಜಮೀನು ಹಡಿಲು ಬಿದ್ದಿರುವುದು ಗಮನಕ್ಕೆ ಬಂದಿದೆ. ಇದರಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಸಂಬಂಧಿಸಿದ ಶಾಸಕರೊಂದಿಗೆ ಚರ್ಚಿಸಿ ಯೋಜನೆ ರೂಪಿಸಲಾಗಿದೆ. ಈಗಾಗಲೇ ಬಂಟ್ವಾಳ, ಮೂಡುಬಿದಿರೆ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಭೆ ಮಾಡಲಾಗಿದ್ದು, ಬಂಟ್ವಾಳದಲ್ಲಿ 160 ಎಕರೆ, ಮೂಡುಬಿದಿರೆಯಲ್ಲಿ 415 ಎಕರೆ ಮತ್ತು ಪುತ್ತೂರಿನಲ್ಲಿ 54 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಕೃಷಿ ಇಲಾಖೆಯ ಮೂಲಕ ಇಲ್ಲಿ ಭತ್ತದ ನಾಟಿ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಪೂರ್ವ ತಯಾರಿಯಾಗಿ ಉತ್ತಮ ತಳಿಯ ಬಿತ್ತನೆ ಬೀಜ, ಉಳುಮೆ ಮತ್ತು ನಾಟಿ ಕೆಲಸಗಳಿಗೆ ಸಹಕಾರ ನೀಡಲಾಗುವುದು ಎಂದರು.