ಮಂಗಳೂರು: ಕೊರೊನಾ ಸೋಂಕಿನಿಂದ ಕ್ವಾರೆಂಟೈನ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ಮುಂಜಾಗ್ರತಾ ಕ್ರಮಗಳ ಕುರಿತು ತುರ್ತು ಸಭೆ ನಡೆಸಿದರು.
ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆ ಪ್ರಗತಿ, ಚಿಕಿತ್ಸೆ ವ್ಯವಸ್ಥೆ, ಲಸಿಕೆ ವಿತರಣೆ ಪ್ರಗತಿ ಹಾಗೂ ಕೊರೊನಾ ಸಂಬಂಧ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದರು. ಅಲ್ಲದೇ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಅಕಾಲಿಕ ಮಳೆಯಿಂದ ಉಂಟಾದ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು.
ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮುಂತಾದ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.