ಬಂಟ್ವಾಳ (ದಕ್ಷಿಣ ಕನ್ನಡ): ಮುಖ್ಯಮಂತ್ರಿಗಳು ಯಾವ ಮಾರ್ಗಸೂಚಿಗಳನ್ನು ನೀಡಿದ್ದಾರೋ ಆ ಪ್ರಕಾರ ಕೋವಿಡ್ ನಿಯಂತ್ರಣಕ್ಕೆ ನಿಯಮಾವಳಿಗಳನ್ನು ಪಾಲಿಸಲಾಗುತ್ತದೆ. ಈ ಕುರಿತು ಯಾವುದೇ ಪ್ರತ್ಯೇಕ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಮಪಾಲನೆ ಕುರಿತು ಜಿಲ್ಲಾಧಿಕಾರಿ ಅವರು ಮಾರ್ಗಸೂಚಿಗಳನ್ನು ಹೊರಡಿಸಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಮತ್ತೊಂದು ಹೇಳಿಕೆ ನೀಡುವುದರ ಕುರಿತು ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ.
ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಅವುಗಳ ಪೈಕಿ, ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲಾಗುವುದು.
ಹೆದ್ದಾರಿ ಪಕ್ಕದಲ್ಲೇ ಇರುವ 4 ಎಕರೆ ಜಾಗದಲ್ಲಿ ಸುಮಾರು 6 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿದ್ದು, ಶಸ್ತ್ರಚಿಕಿತ್ಸೆಯನ್ನು ಇಲ್ಲಿಯೇ ನಿರ್ವಹಿಸುವುದರ ಕುರಿತು ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದ್ದಾರೆ.