ಉಪ್ಪಿನಂಗಡಿ(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಸದ್ದು ಮಾಡಿದೆ. ಓರ್ವ ವಿದ್ಯಾರ್ಥಿ- ವಿದ್ಯಾರ್ಥಿನಿಯನ್ನು ತಡೆದು ನಿಲ್ಲಿಸಿದ ಯುವಕರ ತಂಡವು ಹಲ್ಲೆ ನಡೆಸಿ, ಬೆದರಿಕೆ ಹಾಕಿದೆ.
ಈ ಘಟನೆ ಉಪ್ಪಿನಂಗಡಿ ಎಂಬಲ್ಲಿ ನಡೆದಿದೆ. ವಾರದ ಹಿಂದೆ ಈ ಪ್ರಕರಣ ನಡೆದಿದೆ ಎಂದು ಹೇಳಲಾಗುತ್ತಿದ್ದರೂ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿನಿಯೊಬ್ಬಳು ಪರಿಚಿತ ವಿದ್ಯಾರ್ಥಿಯೊಂದಿಗೆ ಇದ್ದುದನ್ನು ನೋಡಿದ ಯುವಕರ ತಂಡವು ತಡೆದು ನಿಲ್ಲಿಸಿದೆ. ಬಳಿಕ ಯಾರು, ಏನು, ಎತ್ತ ಎಂದು ತಮ್ಮದೇ ಭಾಷೆಯಲ್ಲಿ ಸಂಭಾಷಣೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ ಆ ತಂಡ ವಿದ್ಯಾರ್ಥಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮೆರೆದಿದೆ.
ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣೆಯಲ್ಲಿ ವಿದ್ಯಾರ್ಥಿನಿಯ ತಾಯಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದೀಗ ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ, ಈ ನೈತಿಕ ಪೊಲೀಸ್‌ಗಿರಿಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಮಾತ್ರವಲ್ಲದೆ ಈ ಘಟನೆ ಸುಮಾರು ಒಂದು ತಿಂಗಳ ಹಿಂದೆ ನಡೆದಿರುವ ಬಗ್ಗೆ ತಿಳಿದು ಬಂದಿದೆ. ಈ ಘಟನೆಯನ್ನು ವಿಡಿಯೋ ಮಾಡಿ ವೈರಲ್ ಮಾಡಿದವರ ಮೇಲೂ ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಮಂಗಳೂರು: ಬೈಕ್ ಅಡ್ಡಗಟ್ಟಿ ಯುವಕ, ಯುವತಿಗೆ ನೈತಿಕ ಪೊಲೀಸ್‌ಗಿರಿ, ಇಬ್ಬರ ಬಂಧನ