ಮಂಗಳೂರು : ಕರಾವಳಿ ಕರ್ನಾಟಕದ ತೆರಿಗೆದಾರರ ಹಿತಾಸಕ್ತಿಗೆ ಪೂರಕವಾಗಿ ಮಂಗಳೂರಿನ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿ ಯಥಾಸ್ಥಿತಿಯಂತೆ ಮುಂದುವರಿಯಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕೇಂದ್ರೀಯ ನೇರ ತೆರಿಗೆ ಮಂಡಳಿಯ ನಿರ್ಧಾರದಂತೆ ಕಳೆದ ಎರಡು ದಶಕಗಳಿಗಿಂತ ಹೆಚ್ಚು ಕಾಲ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆದಾಯ ತೆರಿಗೆ ಪ್ರಧಾನ ಆಯುಕ್ತರ (ಆಡಳಿತ) ಕಚೇರಿಯನ್ನು ಗೋವಾದ ಪಣಜಿಯ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯಲ್ಲಿ ವಿಲೀನಗೊಳಿಸುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದೇನೆ.
ಇದೀಗ ಅವರು ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಾಯ ತೆರಿಗೆ ಪ್ರದಾನ ಆಯುಕ್ತರ ಕಚೇರಿಯನ್ನು ಮಂಗಳೂರಿನಲ್ಲಿಯೇ ಮುಂದುವರೆಸಲು ಒಪ್ಪಿಗೆ ನೀಡಿದ್ದಾರೆ. ನನ್ನ ವೈಯುಕ್ತಿಕ ಮನವಿಯನ್ನು ಪುರಸ್ಕರಿಸಿದ ನಿರ್ಮಲಾ ಸೀತಾರಾಮನ್ ಅವರಿಗೆ ಕರಾವಳಿಯ ಸಮಸ್ತ ತೆರಿಗೆದಾರರ, ಲೆಕ್ಕಪರಿಶೋಧಕರ ಪರವಾಗಿ ಅನಂತ ಧನ್ಯವಾದಗಳು. ಇದಕ್ಕೆ ಸಹಕರಿಸಿದ ಸಚಿವರಾದ ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದಗೌಡ ಅವರಿಗೂ ಕೃತಜ್ಞತೆ ಎಂದು ನಳಿನ್ ಕುಮಾರ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.