ಮಂಗಳೂರು: ಅರಬ್ಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ಇದರ ಪ್ರಭಾವದಿಂದ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಅಕ್ಟೋಬರ್ 18 ರಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿತ್ತು. ಅದು ಇಂದೂ ಕೂಡ ಮುಂದುವರೆದಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆ ಬೀಳುವ ಸಾಧ್ಯತೆಯ ಸೂಚನೆ ನೀಡಿದೆ.
ಸಾರ್ವಜನಿಕರು ಈ ಅವಧಿಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.