ಮಂಗಳೂರು: ಪಾನಮತ್ತನಾಗಿ ಕಾರು ಚಲಾಯಿಸಿದ ಪಿಡಬ್ಲ್ಯೂಡಿ ಎಇಇ ಒಬ್ಬರು ವ್ಯಕ್ತಿಯೊಬ್ಬನ ಸಾವಿಗೆ ಕಾರಣರಾಗಿದ್ದಾರೆ. ಮದ್ಯದ ಅಮಲಿನಲ್ಲಿ ಕಾರು ಡ್ರೈವ್ ಮಾಡಿ, ಪಾದಚಾರಿಯೋರ್ವರಿಗೆ ಕಾರು ಡಿಕ್ಕಿ ಹೊಡೆಸಿದ್ದರಿಂದ ಆತ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಸರ್ಕ್ಯೂಟ್ ಹೌಸ್ ಬಳಿ ನಡೆದಿದೆ.
ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ ಆನಂದ ಮೃತಪಟ್ಟವರು. ಕಾರು ಡಿಕ್ಕಿ ಹೊಡೆದು ಸಾವಿಗೆ ಕಾರಣನಾದ ಆರೋಪಿ ಸಣ್ಣ ನೀರಾವರಿ ಅಂತರ್ಜಲ ಅಭಿವೃದ್ಧಿ ಇಲಾಖೆಯ ಮಂಗಳೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಷಣ್ಮುಗಂನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ ರಾತ್ರಿ ಸುಮಾರು 9.53ಕ್ಕೆ ಸರ್ಕ್ಯೂಟ್ ಹೌಸ್ ಬಳಿ ಈ ಘಟನೆ ನಡೆದಿದೆ. ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಷಣ್ಮುಗಂ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಆನಂದ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಅವರು ಸಾಕಷ್ಟು ದೂರ ಎಗರಿ ಬಿದ್ದು ಮೃತಪಟ್ಟಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಗಂಗಾವತಿಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ