ಬಂಟ್ವಾಳ: ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ಗಣಿಗಾರಿಕೆ ನಡೆಯುತ್ತಿರುವುದರಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ. ಕೂಡಲೇ ಪರವಾನಿಗೆ ರದ್ದುಗೊಳಿಸಲು ಸರ್ಕಾರ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಒತ್ತಾಯಿಸಿದ್ದಾರೆ.
ಶನಿವಾರ ಶ್ರೀಕ್ಷೇತ್ರ ಕಾರಿಂಜ ಪಾರ್ವತಿ - ಪರಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿಗಾರಿಕೆಯಿಂದಾಗಿ ಭಾಗಶಃ ಹಾನಿಯಾಗಿದ್ದು, ದೇವಾಲಯದ ಶಿಲೆಗಳು ಬಿರುಕು ಬಿಟ್ಟಿವೆ. ಹಾಗಾಗಿ, ಇಂತಹ ಪವಿತ್ರ ಕ್ಷೇತ್ರಕ್ಕೆ ಕಿಂಚಿತ್ತು ಧಕ್ಕೆಯಾಗದಂತೆ ಸಂರಕ್ಷಿಸುವುದು ಸಮಸ್ತ ಹಿಂದೂ ಸಮಾಜದ ಹೊಣೆಯಾಗಿದೆ ಎಂದರು.
ಶುಕ್ರವಾರವಷ್ಟೇ ಮಠಕ್ಕೆ ಭೇಟಿ ನೀಡಿದ್ದ ರಾಜ್ಯದ ಗಣಿ ಸಚಿವರಿಗೆ ಗಣಿಗಾರಿಕೆಯಿಂದ ಕಾರಿಂಜ ಕ್ಷೇತ್ರಕ್ಕೆ ಆಗುತ್ತಿರುವ ಅಪಾಯದ ಬಗ್ಗೆ ಮನವರಿಕೆ ಮಾಡಿ, ಅವರ ಗಮನಕ್ಕೆ ತಂದಿದ್ದೇನೆ. ಸಚಿವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ, ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಮತ್ತಿತರರು ಇದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ