ಮಂಗಳೂರು: ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿಯ ಪೊಲೀಸ್ ವೃತ್ತ ನಿರೀಕ್ಷಕ ಗಂಗಿ ರೆಡ್ಡಿ ಎಂಬುವವರಿಗೆ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ 4 ವರ್ಷ ಸಾದಾ ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ.
![Police officer fined for fraud in mangalore](https://etvbharatimages.akamaized.net/etvbharat/prod-images/kn-mng-03-police-officer-case-script-ka10015_27082020185401_2708f_1598534641_746.jpg)
ದಂಡ ಪಾವತಿಸುವುದು ತಪ್ಪಿದಲ್ಲಿ ಒಂದು ವರ್ಷ ಸಾದಾ ಸಜೆ ವಿಧಿಸುವಂತೆ ಆದೇಶಿಸಿದೆ. 2009 ಆಗಸ್ಟ್ 27 ರಂದು ಆಗಿನ ಲೋಕಾಯುಕ್ತ ಡಿವೈಎಸ್ಪಿ ಸದಾನಂದ ವರ್ಣೀಕರ್ ಅವರ ತಂಡ ಗಂಗಿ ರೆಡ್ಡಿ ಮನೆ ಮೇಲೆ ದಾಳಿ ನಡೆಸಿ, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.
ಇದರಲ್ಲಿ ಆದಾಯಕ್ಕಿಂತ ಹೆಚ್ಚಿಗೆ 19 ಲಕ್ಷ ರೂಪಾಯಿ ಆಸ್ತಿ ಪತ್ತೆಯಾಗಿತ್ತು. ಆ ಬಳಿಕ ತನಿಖೆಯನ್ನು ಪೂರ್ಣಗೊಳಿಸಿದ ಡಿವೈಎಸ್ಪಿ ಎಂ. ವಿಠ್ಠಲ್ ದಾಸ್ ಪೈ, ಆರೋಪಿ ಗಂಗಿ ರೆಡ್ಡಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ. ಅಭಿಯೋಜನೆಯ ಪರವಾಗಿ 22 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.