ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಮುಂದುವರೆಸಿರುವ ಎನ್ಐಎ, ಮೂವರು ವಾಂಟೆಡ್ ಆರೋಪಿಗಳ ಪತ್ತೆಗೆ ತಲಾ 2 ಲಕ್ಷ ಬಹುಮಾನ ಘೋಷಣೆ ಮಾಡಿ ನೋಟಿಸ್ ಹೊರಡಿಸಿದೆ. ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಹಲವು ಆರೋಪಿಗಳನ್ನು ಎನ್ಐಎ ಈಗಾಗಲೇ ಬಂಧಿಸಿ ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಮೇಲೆ ವಾಂಟೆಡ್ ನೋಟಿಸ್ ಜಾರಿ ಮಾಡಿದೆ.
ಬೆಳ್ತಂಗಡಿ ಪಡಂಗಡಿ ನಿವಾಸಿ ನೌಷಾದ್(32), ಕೊಡಗು ಸೋಮವಾರ ಪೇಟೆ ನಿವಾಸಿಗಳಾದ ಅಬ್ದುಲ್ ನಾಸೀರ್(41), ಅಬ್ದುಲ್ ರಹಮಾನ್(36) ವಾಂಟೆಡ್ ನೋಟಿಸ್ ಜಾರಿಯಾದ ಆರೋಪಿಗಳು. ಇವರ ಸುಳಿವು ನೀಡಿದವರಿಗೆ ಎನ್ಐಎ ನಗದು ಬಹುಮಾನ ಘೋಷಿಸಿದೆ. ಇವರೆಲ್ಲರೂ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರಾಗಿದ್ದರು ಎಂದು ಹೇಳಲಾಗಿದೆ.
ಪ್ರಕರಣದ ಹಿನ್ನೆಲೆ: ಕಳೆದ ವರ್ಷದ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ಮಾಡಿ ಕೊಲೆಗೈದಿದ್ದರು. ರಾತ್ರಿ 8 ಗಂಟೆಯ ಸುಮಾರಿಗೆ ಪ್ರವೀಣ್ ಬೈಕ್‌ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಮುಸುಕುಧಾರಿಗಳು ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಅರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದರು.
ಈ ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ವಿಶೇಷ ತಂಡಗಳನ್ನು ರಚಿಸಿತ್ತು. ನಂತರ ನಡೆದ ಬೆಳವಣಿಗೆಗಳಲ್ಲಿ ಕೊಲೆಗೆ ಸಹಕಾರ ನೀಡಿದ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್