ಮಂಗಳೂರು: ಜೂನ್ 18 ರಂದು ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ದ.ಕ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ವ್ಯವಸ್ಥೆ ಮಾಡಿದೆ.
ಪಿಯುಸಿ ಪರೀಕ್ಷೆ ಬರೆಯಲು ಬರುವ ಕೇರಳ ರಾಜ್ಯದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದಿಂದಲೇ ಬಸ್ ವ್ಯವಸ್ಥೆ ಮಾಡಲಾಗುತ್ತಿದೆ. ಕಾಸರಗೋಡು ಜಿಲ್ಲೆಯ 1137 ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಬರೆಯಲಿರುವ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 7.30 ಕ್ಕೆ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ 30 ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಈ ಎಲ್ಲಾ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನ್ ಮಾಡಿ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬರಲಾಗುತ್ತದೆ. ಕೇರಳ ಹೊರತುಪಡಿಸಿ ಹೊರ ರಾಜ್ಯದ 11 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದು, ಇವರೆಲ್ಲರೂ ಈಗಾಗಲೇ ಜಿಲ್ಲೆಗೆ ಆಗಮಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 26,942 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಜಿಲ್ಲೆಯ 6,322 ವಿದ್ಯಾರ್ಥಿಗಳು ಹೊರಜಿಲ್ಲೆಯಲ್ಲಿ ಇರುವುದರಿಂದ ಅವರಿಗೆ ಅಲ್ಲಿಯೆ ಪರೀಕ್ಷೆ ವ್ಯವಸ್ಥೆ ಮಾಡಲಾಗಿದೆ. ಹೊರಜಿಲ್ಲೆಯ 46 ಮಂದಿ ವಿದ್ಯಾರ್ಥಿಗಳು ದ.ಕ ಜಿಲ್ಲೆಯಲ್ಲಿ ಇದ್ದು, ಅವರು ಇಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ದ.ಕ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿಷ್ಣುಮೂರ್ತಿ ತಿಳಿಸಿದ್ದಾರೆ.