ಮಂಗಳೂರು: ನಿನ್ನೆ ಸಂಜೆಯಿಂದ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಶೃಂಗೇರಿ ಕಡೆಗೆ ಪ್ರಯಾಣ ಬೆಳೆಸಿದರು.
ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ನಿನ್ನೆ ಕುಟುಂಬ ಸಮೇತರಾಗಿ ಮಂಗಳೂರಿಗೆ ಆಗಮಿಸಿದ್ದರು. ಜೊತೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಹ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ವಾಸ್ತವ್ಯವಿದ್ದರು. ನಿನ್ನೆ ರಾತ್ರಿ ರಾಜ್ಯಪಾಲರಿಗೆ ಮತ್ತು ರಾಷ್ಟ್ರಪತಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಕರಾವಳಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.
ರಾಷ್ಟ್ರಪತಿ ಹಾಗೂ ರಾಜ್ಯಪಾಲರ ಭೋಜನಕ್ಕೆ ವಿಶೇಷವಾಗಿ ಓಶಿಯನ್ ಪರ್ಲ್ ಹೋಟೆಲ್ನಿಂದ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡಲಾಗಿತ್ತು. ಇಂದು ಬೆಳಗ್ಗಿನ ಉಪಹಾರ ಮುಗಿಸಿ 10.30 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ ಇಬ್ಬರು ನಾಯಕರು ವಿಶೇಷ ಹೆಲಿಕಾಪ್ಟರ್ನಲ್ಲಿ ಶೃಂಗೇರಿಗೆ ಪ್ರಯಾಣ ಬೆಳೆಸಿದರು.
ಶೃಂಗೇರಿಯಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ನಂತರ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆ. ಮತ್ತೆ ಸಂಜೆ 4.20ಕ್ಕೆ ಶೃಂಗೇರಿ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಮೂಲಕ ಹೊರಟು 4.55ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. 5.10ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ 8.10ಕ್ಕೆ ದೆಹಲಿ ತಲುಪಲಿದ್ದಾರೆ.