ಮಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆದ್ದರಿಂದ ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮರ್ಥ್ಯದ ಶೇ. 50 ರಷ್ಟನ್ನು ಸರ್ಕಾರಕ್ಕೆ ಬಿಟ್ಟು ಕೊಡಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಗುರುವಾರ ಎ.ಜೆ.ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಮಾತನಾಡಿದ ಅವರು, ಸಾರ್ವಜನಿಕರ ಆರೋಗ್ಯ ರಕ್ಷಣೆ ಸರ್ಕಾರದ ಆದ್ಯತೆಯಾಗಿದ್ದು, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರ್ಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರ್ಕಾರವು ಆಯುಷ್ಮಾನ್ ಯೋಜನೆಯಡಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರ್ಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಸಚಿವರು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ರ್ಯಾಪಿಡ್ ಕಿಟ್ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೊರೊನಾ ತಪಾಸಣೆ ಮಾಡಲು ಸೂಚಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ. ಜಿಲ್ಲೆಗೆ ರಾಜ್ಯ ಸರ್ಕಾರವು 50 ವೆಂಟಿಲೇಟರ್ಗಳನ್ನು ಸರಬರಾಜು ಮಾಡಲಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಯ ವಿವರ, ಶುಲ್ಕ ಮಾಹಿತಿ, ಆಯುಷ್ಮಾನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋರ್ಡ್ ಹಾಕಿ ವಿವರ ನಮೂದಿಸಬೇಕು. ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿನ 100 ಮಂದಿಯ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ತಿಳಿಸಿದರು.
ಸಾರ್ವಜನಿಕರಿಗೆ ಆಯುಷ್ಮಾನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ಈ ಸಂದರ್ಭ ಶಾಸಕ ಡಾ. ಭರತ್ ಶೆಟ್ಟಿ, ಜಿಪಂ ಸಿಇಒ ಡಾ. ಸೆಲ್ವಮಣಿ ಆರ್., ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ವೆನ್ ಲಾಕ್ ಅಧೀಕ್ಷಕ ಡಾ.ಸದಾಶಿವ, ಎ.ಜೆ.ಆಸ್ಪತ್ರೆ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಶ್ರೀನಿವಾಸ ಮೆಡಿಕಲ್ ಕಾಲೇಜಿನ ಡೀನ್ ಡಾ.ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.