ಬಂಟ್ವಾಳ (ದ.ಕ): ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಹಾಗೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ದಿನವಿಡೀ ಉಪವಾಸ ಸತ್ಯಾಗ್ರಹ ನಡೆಸಿ ಪ್ರತಿಭಟಿಸಿವೆ.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ, ರೈತರ ಪರ ಎಂಬ ಹೆಸರಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದು, ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ.
ರೈತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಎಂ.ಎಸ್.ಸ್ವಾಮಿನಾಥನ್ ವರದಿ ಸಂಪೂರ್ಣ ಜಾರಿ ಮಾಡಬೇಕು. ರೈತಪರ ಹೋರಾಟಗಾರರಿಗೆ ಬೆಂಬಲ ಸೂಚಿಸಿ ಇಂದು ಸತ್ಯಾಗ್ರಹ ನಡೆಸುತ್ತಿದ್ದೇವೆ ಎಂದರು.
ಭೂ ಸುಧಾರಣಾ ಕಾಯ್ದೆ ಸಹಿತ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತೀ ತಾಲೂಕಿನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಜನವರಿ 26ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಿಂದ ಮಂಗಳೂರು ಮಿನಿ ವಿಧಾನಸೌಧದವರೆಗೆ ಜಿಲ್ಲೆಯ ಸಾವಿರಾರು ರೈತರು ತಮ್ಮ ಟ್ರ್ಯಾಕ್ಟರ್ಗಳೊಂದಿಗೆ ಬೃಹತ್ ಮೆರವಣಿಗೆ ಹಾಗೂ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ ಎಂದರು.
ಇದನ್ನೂ ಓದಿ: ಕಿರುಕುಳ ಆರೋಪ: ಯುವಕನ ಮೇಲೆ ಕಾವೂರು ಠಾಣೆಯಲ್ಲಿ ದೂರು ದಾಖಲು