ಕಡಬ: ವಿದ್ಯುತ್ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ನೀಡಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಡಬ ತಾಲೂಕಿನದ್ಯಾಂತ ಸುಮಾರು 43 ಗ್ರಾಮಗಳಿವೆ. ಇಲ್ಲಿನ ಜನರು ಕೃಷಿಯನ್ನೇ ಅವಲಂಬಿಸಿದ್ದು, ಕಳೆದ 3 ವರ್ಷಗಳಿಂದ ನಿರಂತರವಾಗಿ ಇಲ್ಲಿ ವಿದ್ಯುತ್ ಸಮಸ್ಯೆ ಇದೆ. ಈ ಬಗ್ಗೆ ಹಲವು ಬಾರಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇನ್ನು ಈ ಬಗ್ಗೆ ಸ್ಥಳೀಯ ಸುಳ್ಯ ಶಾಸಕ ಎಸ್.ಅಂಗಾರರಿಗೂ ಮನವಿ ನೀಡಿದ್ರೂ ಸೂಕ್ತ ಸ್ಪಂದನೆ ದೊರೆತಿಲ್ಲವಂತೆ. ಈ ಹಿನ್ನೆಲೆಯಲ್ಲಿ ಇಂದು ಕಡಬದಲ್ಲಿ ಹಲವು ಸಂಘ ಸಂಸ್ಥೆಗಳು, ರೈತರು ರಾಜಕೀಯ ಪಕ್ಷಗಳು ಸೇರಿ ಕಡಬ ಪೇಟೆಯಿಂದ ಬೃಹತ್ ಪ್ರತಿಭಟನೆ ನಡೆಸಿದರು. ಮೆರವಣಿಗೆ ಮೂಲಕ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿ ಮೆಸ್ಕಾಂ ಅಧಿಕಾರಿಗಳು ಹೊರಬರುವಂತೆ ಒತ್ತಾಯಿಸಿದ್ರು. ಈ ಹಿಂದೆ ಮೆಸ್ಕಾಂ ಕಚೇರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ರೂ ಕ್ರಮ ತೆಗೆದುಕೊಳ್ಳದ್ದಕ್ಕೆ ಅಕ್ರೋಶಗೊಂಡ ಪ್ರತಿಭಟನಾನಿರತರು, ಮೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ್ರು. 15 ದಿನದೊಳಗೆ ಸಮಸ್ಯೆ ಬಗೆಹರಿಸದಿದ್ರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ರು.