ಪುತ್ತೂರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿದ್ದ ವೇಳೆ ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಸ್ತುತ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿರುವ ಪ್ರಕಾಶ್ ಎಸ್.ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಜುಲೈ 6, 2011 ರಂದು ಫಾರೂಕ್ ಎಂಬವರಿಂದ ಎಫ್ಐಆರ್ ದಾಖಲಿಸಲು 1 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ, ಮಂಗಳೂರು ಲೋಕಾಯುಕ್ತ ನಿರೀಕ್ಷಕ ದಿಲೀಪ್ ಕುಮಾರ್ ಮತ್ತು ತಂಡದವರು ದಾಳಿ ನಡೆಸಿ, ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್ ಅವರನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯ, ವಿಶೇಷ ಸರ್ಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಾದ ಪುರಸ್ಕರಿಸಿದ್ದು, ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದಿದೆ. ಅಲ್ಲದೆ, ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಅಪರಾಧಿಗೆ 3 ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ.
ಓದಿ : ಮಹಿಳಾ ಪ್ರಿನ್ಸಿಪಾಲ್ಗೆ ಲೈಂಗಿಕ ಕಿರುಕುಳ ಆರೋಪ: ಕ್ಲಬ್ ಉಪಾಧ್ಯಕ್ಷನ ಮೇಲೆ ಪ್ರಕರಣ ದಾಖಲು
ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 7 ರ ಅಡಿಯಲ್ಲಿ ಅಪರಾಧಿಗೆ 1 ವರ್ಷ ಸಾದಾ ಸಜೆ ಮತ್ತು 5 ಸಾವಿರ ರೂ. ದಂಡ, ಕಲಂ 13 (1) (ಡಿ) ಯಡಿ 2 ವರ್ಷ ಸಾದಾ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಲಾಗಿದೆ. ಆರೋಪಿ ದಂಡ ತೆರಲು ತಪ್ಪಿದಲ್ಲಿ 2 ತಿಂಗಳ ಸಾದಾ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಪಿರ್ಯಾದಿದಾರರು ನ್ಯಾಯಾಲಯದಲ್ಲಿ ಪ್ರತಿಕೂಲ ಸಾಕ್ಷ್ಯ ನುಡಿದಿದ್ದರು. ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ಫಿರ್ಯಾದಿದಾರರು ತಮ್ಮ ಫಿರ್ಯಾದಿಯಲ್ಲಿ ಹೇಳಿದ ವಿಚಾರಕ್ಕೆ ವ್ಯತಿರಿಕ್ತ ಸಾಕ್ಷಿ ನೀಡಿದರೂ ಕೂಡ, ಇತರೆ ಸಾಂದರ್ಭಿಕ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿತನನ್ನು ಶಿಕ್ಷೆಗೆ ಒಳಪಡಿಸಬಹುದು ಎಂದು ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಮತ್ತು ವಿಶೇಷ ಸರ್ಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ರವರ ವಾದವನ್ನು ಪರಿಗಣಿಸಿರುವುದಾಗಿ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.