ಮಂಗಳೂರು: ಕರಾವಳಿಯಲ್ಲಿ ಕಳೆದ ದಿನಗಳಿಂದ ಗಾಳಿ ಸಮೇತ ಭಾರಿ ಮಳೆಯಾಗುತ್ತಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣವಿದ್ದು, ಸಣ್ಣದಾಗಿ ಮಳೆ ಬೀಳಲಾರಂಭಿಸಿದೆ. ಮಳೆಯ ತೀವ್ರತೆ ಜಾಸ್ತಿ ಇರುವುದರಿಂದ ಆಗಸ್ಟ್ 6 ರಿಂದ ಇಂದಿನವರೆಗೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿತ್ತು.ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಇಂದೂ ಕೂಡ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲೆಯಾದ್ಯಂತ ಅಲ್ಲಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಹಲವೆಡೆ ನೀರು ರಸ್ತೆಯಲ್ಲೆಲ್ಲಾ ಹರಿದರೆ, ಕೆಲವೆಡೆ ಮರಗಳು ಧರೆಗುರುಳಿದ್ದು, ಗುಡ್ಡ ಕುಸಿತವೂ ಆಗಿದೆ. ಇದರಿಂದ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಹಾಗೂ ಸುಬ್ರಹ್ಮಣ್ಯ-ಸಕಲೇಶಪುರ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜೀವನದಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸೋಮೇಶ್ವರ-ಉಚ್ಚಿಲ ಹಾಗೂ ಸಸಿಹಿತ್ಲು ಪ್ರದೇಶದಲ್ಲಿ ಕಡಲ್ಕೊರೆತ ಭೀತಿ ಹೆಚ್ಚಾಗಿದೆ. ಕಡಲು ಪ್ರಕ್ಷುಬ್ಧಗೊಂಡಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.