ಮಂಗಳೂರು: ನಗರದ ಹೊರವಲಯದಲ್ಲಿನ ಮುಡಿಪು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ರೆಡ್ ಬಾಕ್ಸೈಟ್ ದಂಧೆ ಕುರಿತು ತನಿಖೆ ನಡೆಸಿ,10 ದಿನಗಳೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.
ಇದಕ್ಕಾಗಿ 7 ಜನ ಅಧಿಕಾರಿಗಳ ವಿಶೇಷ ತಂಡ ರಚಿಸಲಾಗಿದ್ದು, ಅ.20 ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಮುಡಿಪು, ಇರಾ, ಬಾಳೆಪುಣಿ, ಇನ್ನೋಳಿ ಮುಂತಾದ ಪ್ರದೇಶಗಳಲ್ಲಿ ರೆಡ್ ಬಾಕ್ಸೈಟ್ ಗಣಿಗಾರಿಕೆಯಿಂದ ಪ್ರಾಕೃತಿಕ ಸಂಪತ್ತು ಲೂಟಿಯಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಅಲ್ಲದೇ ಸ್ಥಳೀಯರಿಂದಲೂ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆ ಜಿಲ್ಲಾಧಿಕಾರಿ ವಿಶೇಷ ತಂಡ ರಚಿಸಿ ವರದಿ ಸಲ್ಲಿಸುವಂತೆ ಆದೇಶ ಹೊರಡಿಸಿದ್ದಾರೆ.