ಬೆಳ್ತಂಗಡಿ: ಅಶ್ಲೀಲ ವೆಬ್ಸೈಟ್ಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಬೇಕೆಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಮಹಿಳೆಯರ ಮತ್ತು ಮಕ್ಕಳ ವಿರುದ್ಧ ನಡೆಯುತ್ತಿರುವಂತಹ ಲೈಂಗಿಕ ದೌರ್ಜನ್ಯಗಳು, ಮತ್ತು ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೊಂದು ಅಂತ್ಯ ಕಾಣಬೇಕಿದೆ. ಮಕ್ಕಳು ಮತ್ತು ಯುವಕರು ಹೆಚ್ಚಾಗಿ ಈ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಾರೆ. ಅವರ ಮನಸ್ಥಿತಿ ಹಾಳಾಗಲು ಈ ರೀತಿಯ ಚಿತ್ರಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಆದುದರಿಂದ ಅಶ್ಲೀಲ ಜಾಲತಾಣಗಳನ್ನು ಮತ್ತು ಆಶ್ಲೀಲ ಮಾಹಿತಿಗಳನ್ನು ಹರಡುತ್ತಿರುವ ವೆಬ್‍ಸೈಟುಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕಾಗಿ ಪತ್ರದಲ್ಲಿ ಕೋರಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ರೆವರೆಂಡ್ ಫಾದರ್ ಡಾ.ತೋಮಸ್ ಕಳ್ಳಿಕಾಟ್ರವರು ಪತ್ರಕರ್ತರಿಗೆ ಮಾಹಿತಿ ನೀಡಿದ್ದಾರೆ.