ಪುತ್ತೂರು: ಮೂಲಭೂತ ಸೌಕರ್ಯಗಳಲ್ಲಿ ರಸ್ತೆ ಮನುಷ್ಯನ ಅವಿಭಾಜ್ಯ ಅಂಗ. ಈ ನಿಟ್ಟಿನಲ್ಲಿ ಉಭಯ ತಾಲೂಕಿನಲ್ಲಿರುವ ಗ್ರಾಮಾಂತರ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಸರ್ವಋತು ರಸ್ತೆಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.
ಶನಿವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದ ಎಲ್ಲಾ ರಸ್ತೆಗಳು, ಸೇತುವೆಗಳ ಸಂಪರ್ಕ ಸೇತುವಾಗಿ ಮಾಡಲು ಆದ್ಯತೆ ನೀಡಲಾಗಿದೆ. ಪುತ್ತೂರು ತಾಲೂಕಿನಲ್ಲಿ 112.50 ಕಿ.ಮೀ. ಮತ್ತು ಬಂಟ್ವಾಳ ತಾಲೂಕಿನ 40.60 ಕಿ.ಮೀ. ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವರು ತಾನು ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಿ ಗ್ರಾಮೀಣ ಮತ್ತು ಜಿಲ್ಲಾ ಮುಖ್ಯ ರಸ್ತೆಗಳನ್ನು ಮೇಲ್ದರ್ಜೆಗೇರಿಸಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ರಸ್ತೆಗಳನ್ನು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯನ್ನು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿ ಗುರುವಾಯನ್ ಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಗೆ ಸಂಪರ್ಕಿಸಲಾಗುತ್ತದೆ. ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಗೊಳ್ಳಲಿದೆ ಎಂದರು.
ಇನ್ನು ಪುತ್ತೂರು ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸುವ ಮುಗೆರಡ್ಕ ತೂಗುಸೇತುವೆಯು ಕಳೆದ ವರ್ಷ ಪ್ರಾಕೃತಿಕ ವಿಕೋಪದಿಂದ ಹಾನಿಯಾಗಿದ್ದು ಈ ತೂಗುಸೇತುವೆಯನ್ನು ರೂ. 1.55 ಕೋಟಿ ವೆಚ್ಚದಲ್ಲಿ ದುರಸ್ತಿಪಡಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 32 ಶಾಲಾ ಸಂಪರ್ಕ ರಸ್ತೆಗಳಿಗೆ ಕಿರುಸೇತುವೆಗಳನ್ನು ನಿರ್ಮಿಸಲಾಗಿದೆ ಎಂದು ಶಾಸಕರು ವಿವರಿಸಿದರು.