ಪುತ್ತೂರು: ತಾಲೂಕು ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಅವಿರೋಧವಾಗಿ ಆಯ್ಕೆಗೊಂಡರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು. 20 ತಿಂಗಳ ಅವಧಿಯ ಸ್ಥಾಯಿ ಸಮಿತಿ ಅಧಿಕಾರ ಅ. 22ಕ್ಕೆ ಮುಗಿಯಲಿದ್ದು, ಈ ಹಿನ್ನೆಲೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ರಾಜಕೀಯವಾಗಿ ಮತ್ತು ಆಡಳಿತಾತ್ಮಕವಾಗಿ ಉತ್ತಮ ಅನುಭವ ಹೊಂದಿರುವ ಸಾಜ ರಾಧಾಕೃಷ್ಣ ಆಳ್ವ ಅವರು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವುದು ತಾಲೂಕು ಅಭಿವೃದ್ಧಿಗೆ ಪೂರಕವಾದ ವಿಚಾರವಾಗಿದೆ. ನ್ಯಾಯದ ಪರವಾಗಿರುವ ಅವರಿಂದ ಸಾಮಾಜಿಕ ನ್ಯಾಯ ಪರಿಪಾಲನೆಯಾಗಲಿದೆ ಎಂದರು.
ಇನ್ನು ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ತಾಲೂಕು ಪಂಚಾಯಿತಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಬೇಕು. ಇದರಿಂದ ಜನತೆಗೂ ಹೆಚ್ಚು ಅನುಕೂಲವಾಗುತ್ತದೆ. ಅಧಿಕಾರಿ ವರ್ಗವೂ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡಬೇಕು. ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಜನತೆಗೆ ನ್ಯಾಯ ಒದಗಿಸುವ ಕೆಲಸ ಮಾಡುವುದು ನಮ್ಮ ಮುಂದಿನ ಗುರಿಯಾಗಿದೆ ಎಂದರು.