ಮಂಗಳೂರು: ಕೊರೊನಾ ಹರಡುವ ಭೀತಿ ಹಿನ್ನೆಲೆ ದ.ಕ ಜಿಲ್ಲೆಯಲ್ಲಿ ಪಾನ್ ಮಸಾಲ, ಜರ್ದಾ, ಚೈನಿ ಖೈನಿ ಸೇರಿದಂತೆ ತಂಬಾಕು ಪದಾರ್ಥಗಳ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಜಗಿದು ಉಗುಳುವುದರಿಂದ ಜನರಿಗೆ ತೊಂದರೆಯಾಗುತ್ತದೆ. ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯ, ನ್ಯುಮೋನಿಯ ಮತ್ತು ಕೋವಿಡ್-19 ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇದೆ. ಅಲ್ಲದೆ, ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಯ ಮೂಲಕ ವೈರಸ್‍ಗಳು ಮಾನವನ ದೇಹ ಪ್ರವೇಶಿಸಿ, ದೇಹದ ಇತರ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು. ಈ ಹಿನ್ನೆಲೆ ಸಾರ್ವಜನಿಕರ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೂ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆ ನಿಷೇಧಿಸಲಾಗಿದೆ.
ಯಾರದರೂ ನಿಯಮ ಉಲ್ಲಂಘಿಸಿದರೆ ಸಾಂಕ್ರಾಮಿಕ ರೋಗಗಳ ಕಾಯ್ದೆ 1897, ವಿಪತ್ತು ನಿರ್ವಹಣಾ ಕಾಯ್ದೆ 2005, ಐಪಿಸಿ ಸೆಕ್ಷನ್ 188, 268, 269 ಮತ್ತು 270 ರಡಿಯಲ್ಲಿ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.