ಬಂಟ್ವಾಳ(ದ.ಕ): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತವಿದ್ದರೂ, ಅಧಿಕಾರ ದುರುಪಯೋಗ ನಡೆಸಿದ ಆರೋಪಗಳ ನಡುವೆಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಗೆದ್ದಿರುವುದು ಕಾಂಗ್ರೆಸ್ ಸಿದ್ಧಾಂತದ ಮೇಲೆ ಜನರು ವಿಶ್ವಾಸವನ್ನು ಇಟ್ಟಿರುವುದಕ್ಕೆ ಸಾಕ್ಷಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದ್ದಾರೆ.
ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗ್ರಾಪಂ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗಳ ಬೃಹತ್ ರೋಡ್ ಶೋ ಹಾಗೂ ಅಭಿನಂದನಾ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆಯಿತು. ಬಿ.ಸಿ.ರೋಡ್ ಸರ್ಕಲ್ನಿಂದ ಪ್ರಾರಂಭಗೊಂಡು ಗೂಡಿನಬಳಿ ಪಾಣೆಮಂಗಳೂರು ಮುಖಾಂತರ ಸಾಗಿ ಸಾಗರ್ ಹಾಲ್ನಲ್ಲಿ ಸಮಾಪ್ತಿಗೊಂಡಿತು.
ಈ ಸಂದರ್ಭ ಮಾತನಾಡಿದ ಸಲೀಂ ಅಹಮದ್, ತಾಪಂ, ಜಿಪಂ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವಂತೆ ಆಗಬೇಕು. ಸಂಕಲ್ಪ ಸಮಾವೇಶದಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ವಿಚಾರವನ್ನು ಮನೆ ಮನೆಗೆ ತಲುಪಿಸುವ ಕುರಿತು ಯೋಜನೆ ರೂಪಿಸಲಾಗುವುದು. ಸರ್ಕಾರದ ವಿರುದ್ಧ ಹೋರಾಟಕ್ಕೆ ರಣಕಹಳೆ ಮೊಳಗಿಸಲಾಗುವುದು. ಸಂಕಲ್ಪ ಸಮಾವೇಶದಲ್ಲಿ ಪಕ್ಷ ಸಂಘಟನೆ, ಕೇಂದ್ರ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತದೆ ಎಂದರು.
ಇದನ್ನೂ ಓದಿ: ಸಾವಿರ ಕೋಟಿ ವೆಚ್ಚದ ಸ್ಮಾರ್ಟ್ ಸಿಟಿ ಕಾಮಗಾರಿ ಪ್ರಗತಿಯಲ್ಲಿದೆ: ಕಟೀಲ್
ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಬೆಂಬಲಿಗ ಅಭ್ಯರ್ಥಿಗಳಿಗೆ ಒತ್ತಡದ ಫೋನ್ಗಳು ಬರುತ್ತಿದೆ. ಕಾರ್ಯಕರ್ತರು ಎದೆಗುಂದದೆ ಕಾರ್ಯನಿರ್ವಹಿಸಬೇಕು. ದೂರವಾಣಿ ಕರೆ ಮಾಡುವವರಿಗೆ ಸರಿಯಾದ ಉತ್ತರ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ, ಕೆಪಿಸಿಸಿ ಸದಸ್ಯ ಬಾಲರಾಜ್, ಕಣಚೂರು ಮೋನು, ಮುಡಾ ಮಾಜಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಗೇರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್ ಜಿಪಂ ಸದಸ್ಯ ಎಂ.ಎಸ್.ಮಹಮ್ಮದ್, ಪದ್ಮಶೇಖರ ಜೈನ್, ಚಂದ್ರಪ್ರಕಾಶ ಶೆಟ್ಟಿ ಉಪಸ್ಥಿತರಿದ್ದರು.