ಬಂಟ್ವಾಳ: ತಾಲೂಕಿನ ಮಾಣಿಯಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂಗು ಹಾಗೂ ಗಂಟಲು ದ್ರವ ಸಂಗ್ರಹಿಸುವ ಉಪಕರಣವನ್ನು ಸೋಮವಾರ ಹಸ್ತಾಂತರಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳಾ ಮಾಧವ ಮಾವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ನೆರವಾಗುವ ಉದ್ದೇಶದಿಂದ ಮಾಣಿ ವಲಯದ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸರ್ಕಾರಿ ಆಸ್ಫತ್ರೆಗೆ ಕೊರೊನಾ ಪರೀಕ್ಷೆಯ ಸಾಧನವನ್ನು ಕೊಡುಗೆಯಾಗಿ ನೀಡಿರುವುದು ಅಭಿನಂದನೀಯ. ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ನಮ್ಮ ಸ್ಕೌಟ್ಸ್ ಸಂಸ್ಥೆ ವತಿಯಿಂದ ಮೂಗು, ಗಂಟಲು ದ್ರವ ಪರೀಕ್ಷಾ ಉಪಕರಣವನ್ನು ಕೊಡುಗೆಯಾಗಿ ನೀಡಿದ್ದೇವೆ. ಮುಖ್ಯಮಂತ್ರಿ ಪರಿಹಾರ ನಿಧಿಗೂ ಹಣ ಒದಗಿಸಿದ್ದೇವೆ ಎಂದರು.
ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ ಮಾತನಾಡಿ, ಕೊರೊನಾ ನಿಗ್ರಹಕ್ಕೆ ಆಸ್ಪತ್ರೆ ವತಿಯಿಂದ ಸಾಕಷ್ಟು ಮುನ್ನೆಚ್ಚರಿಕೆ ವಹಿಸುತ್ತಿದ್ದೇವೆ. ಸ್ಕೌಟ್ಸ್ ಸಂಸ್ಥೆ ವತಿಯಿಂದ ನಮ್ಮ ಆಸ್ಪತ್ರೆಗೆ ಕೊರೊನಾ ಟೆಸ್ಟ್ಗೆ ಬಳಸುವ ಸಾಧನವನ್ನು ನೀಡಿರುವುದು ಹೆಚ್ಚು ಉಪಕಾರಿಯಾಗಿದೆ ಎಂದರು.