ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ರಾಷ್ಟ್ರೀಯ ನೋಂದಣಿ ವಿರೋಧಿಸಿ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ರಾಷ್ಟ್ರೀಯ ನೋಂದಣಿ ವಿರೋಧಿಸಿ ಮಂಗಳೂರಿನ ನೆಹರೂ ಮೈದಾನದಲ್ಲಿ ಸಂರಕ್ಷಣಾ ಸಮಾವೇಶ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿನ್ನೆ ರಾತ್ರಿಯಿಂದ ಡಿ.21ರ ಮಧ್ಯರಾತ್ರಿವರೆಗೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿರಲಿದೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ.
ಈ ಅವಧಿಯಲ್ಲಿ ಶಸ್ತ್ರಾಸ್ತ್ರಗಳು, ಕತ್ತಿ, ದೊಣ್ಣೆ, ಬಂದೂಕು ಹಾಗೂ ಮಾರಕಾಯುಧಗಳನ್ನು ಕೊಂಡೊಯ್ಯುವುದನ್ನು ನಿಷೇಧ ಮಾಡಲಾಗಿದೆ. ಪಟಾಕಿ ಸಿಡಿಸುವುದು, ಪ್ರತಿಭಟನೆ, ಮೆರವಣಿಗೆ, ವಿಜಯೋತ್ಸವ, ಮುಷ್ಕರ, ರಸ್ತೆ ತಡೆ, ರಾಜಕೀಯ ಸಭೆಗಳನ್ನು ನಡೆಸುವುdಉ, ಪ್ರತಿಕೃತಿ ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ, ಅಪರಾಧಕ್ಕೆ ಪ್ರಚೋದಿಸುವ ಬಹಿರಂಗ ಘೋಷಣೆ, ಭಿತ್ತಿಪತ್ರ ಅಂಟಿಸುವುದನ್ನು ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.