ಪುತ್ತೂರು (ದಕ್ಷಿಣ ಕನ್ನಡ): ಕೊರೊನಾ ಲಾಕ್‌ಡೌನ್‌ನಿಂದಾಗಿ ಮುಂದೂಡಲ್ಪಟ್ಟ 2019-20ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜೂ.25 ರಿಂದ ನಡೆಯಲಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಈಗಾಗಲೇ ತಾಲೂಕಿನ 12 ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಇಂದು ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಲೋಕೇಶ್ ಅವರು ಪರಿಶೀಲನೆ ನಡೆಸಿದರು.
ತಾಲೂಕಿನಲ್ಲಿ ಒಟ್ಟು 5007 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬೆಳಿಗ್ಗೆ 10.30ಕ್ಕೆ ಪ್ರಾರಂಭಗೊಂಡು ಮುಗಿದ ಬಳಿಕ ಮತ್ತೆ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಕೊಟ್ಟ ಸೂಚನೆಯಂತೆ ಎಲ್ಲಾ ಕ್ರಮಗಳನ್ನು ಕೈಗೊಂಡಿರುವ ಕುರಿತು ತಹಶೀಲ್ದಾರ್ ಮತ್ತು ಶಿಕ್ಷಣಾಧಿಕಾರಿಯವರು ಖುದ್ದು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಿದ್ದಾರೆ. ಕೊರೊನಾ ವೈರಸ್‌ನಿಂದ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಕೇಂದ್ರದಲ್ಲೂ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಪ್ರಥಮ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಮಾಸ್ಕ್ ಧರಿಸಿಯೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು. ಸ್ಯಾನಿಟೈಸರ್ ಬಳಕೆ ಮಾಡಿಕೊಳ್ಳಬೇಕು. ಇವುಗಳ ಕುರಿತು ಪೋಷಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಮತ್ತು ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿನಂತಿಸಿದ್ದಾರೆ.
ಪರೀಕ್ಷೆ ಪ್ರಾರಂಭವಾಗುವ ಕನಿಷ್ಠ 2 ಗಂಟೆಗೆ ಮುಂಚಿತವಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. ಪ್ರತಿ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಯೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು. ಇದಕ್ಕಾಗಿ ಪ್ರತಿ ವಿದ್ಯಾರ್ಥಿಗಳಿಗೆ 3 ಸೆಟ್ ಮಾಸ್ಕ್ಗಳನ್ನು ವಿತರಿಸಲಾಗಿದೆ. ಪ್ರತಿ ಕೇಂದ್ರಗಳಿಗೂ 200 ವಿದ್ಯಾರ್ಥಿಗಳಿಗೆ 1ರಂತೆ ಥರ್ಮಲ್ ಕ್ಕ್ರೀನಿಂಗ್ ಒದಗಿಸಲಾಗುವುದು. ವಿದ್ಯಾರ್ಥಿಗಳನ್ನು ಥರ್ಮಲ್ ಕ್ಕ್ರೀನಿಂಗ್ ಬಳಿಕವೇ ಕೇಂದ್ರದ ಒಳಗೆ ಕಳುಹಿಸಿಕೊಡಲಾಗುವುದು. ಪ್ರತಿ ಕೊಠಡಿಗಳಿಗೂ ಪ್ರತ್ಯೇಕ ಸ್ಯಾನಿಟೈಸರ್ ಒದಗಿಸಲಾಗುವುದು. ಪರೀಕ್ಷಾ ಕೇಂದ್ರ ಹಾಗೂ ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮರಾ ಕಣ್ಗಾವಲು ಇರಿಸಲಾಗಿದೆ. ಪ್ರತಿ ದಿನ ಧ್ವನಿ ವರ್ಧಕದ ಮುಖಾಂತರ ಎಲ್ಲಾ ಕೇಂದ್ರಗಳಲ್ಲಿಯೂ ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ನೀಡಲಾಗುವುದು ಎಂದು ಲೋಕೇಶ್ ಸಿ. ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಆಗಮಿಸಿರುವ ಕುರಿತು ಖಾತ್ರಿ ಪಡಿಸುವುದು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಯಾವುದೇ ಸೌಲಭ್ಯಗಳು ಇಲ್ಲದೆ ಇದ್ದಲ್ಲಿ ನೋಡೆಲ್ ಶಿಕ್ಷಕರ ಮೂಲಕ ಸೌಲಭ್ಯ ಕಲ್ಪಿಸಲಾಗುವುದು. ಇದಕ್ಕಾಗಿ 3 ಜೀಪು ಹಾಗೂ 2 ಬಸ್‌ಗಳನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.