ಮಂಗಳೂರು: ಮಂಗಳೂರಿನ ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಭವನಕ್ಕೆ ಕಲ್ಲೆಸೆದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಗೂಡ್ಶೆಡ್ ನಿವಾಸಿ ಧನರಾಜ್ ಶೆಟ್ಟಿ (21), ಎಮ್ಮೆಕೆರೆ ನಿವಾಸಿ ಸುಶಾಂತ್ (20), ಕಂದುಕ ನಿವಾಸಿ ಕಾರ್ತಿಕ್ ಶೆಟ್ಟಿ (26), ಹೊಯ್ಗೆಬಜಾರ್ ನಿವಾಸಿಗಳಾದ ಸಾಗರ್ ಬಂಗೇರ (20), ಮನೀಶ್ ಪುತ್ರನ್ (20) ಮತ್ತು ಓರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.
ಅಪ್ರಾಪ್ತ ಬಾಲಕನಿಗೆ ನ್ಯಾಯಾಲಯ ಜಾಮೀನು ನೀಡಿದ್ದು, ಉಳಿದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆ.13 ರಂದು ತಡರಾತ್ರಿ ಮಂಗಳೂರಿನ ಪಾಂಡೇಶ್ವರದಲ್ಲಿರುವ ಮೌಲಾನ ಆಜಾದ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಭವನಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಡಿದ್ದರು. ಕಟ್ಟಡದ ಮೊದಲ ಮಹಡಿಯಲ್ಲಿನ ಮೂರು ಕಿಟಕಿಯ ಗಾಜುಗಳನ್ನು ದುಷ್ಕರ್ಮಿಗಳು ಹಾನಿ ಮಾಡಿದ್ದರು.
ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಟ್ಟಡದಲ್ಲಿನ ಸಿಸಿಟಿವಿ ಕ್ಯಾಮೆರಾಗಳ ಫೂಟೇಜ್‌ಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.