ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ನಿನ್ನೆ (ಮಂಗಳವಾರ) ಹಾಸ್ಟೆಲ್ಗೆ ಭೇಟಿ ನೀಡಿದ್ದರು. ಈ ವೇಳೆ ಹಾಸ್ಟೆಲ್ನಲ್ಲಿರುವ ಅವ್ಯವಸ್ಥೆ ಕಂಡು ಕಿಡಿಕಾರಿದ್ದಾರೆ. ಸ್ಥಳದಲ್ಲೇ ತಾಲೂಕು ವಿಸ್ತರಣಾಧಿಕಾರಿಯನ್ನು ಅಮಾನತು ಮಾಡಿದ್ದಾರೆ.
ಸಚಿವ ಜಮೀರ್ ಅಹಮದ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ಗೆ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಹಾಸ್ಟೆಲ್ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿದೆ.
ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು, ''ಗುಣಮಟ್ಟದ ಆಹಾರ ಕೊಡುತ್ತಿಲ್ಲ. ವಾರಕ್ಕೊಮ್ಮೆ ಚಿಕನ್ ನೀಡದೇ ಹದಿನೈದು ದಿನಕ್ಕೊಮ್ಮೆ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೂರೈಕೆ ಮಾಡುತ್ತಿಲ್ಲ'' ಎಂದು ದೂರಿದ್ದಾರೆ. 5 ವರ್ಷ ಆದರೂ ಬೆಡ್ ಶೀಟ್ ಹಾಗೂ ತಲೆದಿಂಬು ಕೊಟ್ಟಿಲ್ಲ. ನಮ್ಮ ಬಗ್ಗೆ ಯಾರೂ ಕೂಡಾ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಸಚಿವರ ಸಮ್ಮುಖದಲ್ಲಿ ಆರೋಪ ಮಾಡಿದರು. ತಕ್ಷಣವೇ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ಗೆ ಶೋಕಾಸ್ ನೊಟೀಸ್ ನೀಡಲು ಸಚಿವರು ಸೂಚಿಸಿದರು.
ಇತ್ತೀಚೆಗೆ ಕರ್ತವ್ಯಲೋಪದಡಿ ಬಸರಿಹಾಳ, ಬಿಜಕಲ್ ಪಿಡಿಒಗಳ ಅಮಾನತು: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಮತ್ತು ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸರಿಹಾಳ ಮತ್ತು ಬಿಜಕಲ್ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಇತ್ತೀಚೆಗೆ ಅಮಾನತುಗೊಳಿಸಲಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
ಆರೋಗ್ಯ ಅಧಿಕಾರಿಗಳ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ತಪಾಸಣಾ ವರದಿ ಪ್ರಕಾರ, ಈ ಗ್ರಾಮಗಳಲ್ಲಿ ಸ್ವಚ್ಛತೆ, ನೈರ್ಮಲೀಕರಣ ಮತ್ತು ಶುದ್ಧ ಕುಡಿಯುವ ನೀರು ಪೂರೈಸುವ ಜವಾಬ್ದಾರಿಗೆ ಸಂಬಂಧಪಟ್ಟಂತೆ ಗ್ರಾಪಂ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿತ್ತು. ಈ ಕುರಿತು ಕೊಪ್ಪಳ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನೀಡಿದ ವರದಿ ಅನ್ವಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪ್ರಭಾರ) ಹಾಗೂ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪ್ರಭಾರ) ಅವರನ್ನು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ತಿಳಿದಿಬಂದಿತ್ತು.
ಇದನ್ನೂ ಓದಿ: BSF suspends Jawan: ಮಣಿಪುರ ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ; ಬಿಎಸ್‌ಎಫ್ ಯೋಧ ಸಸ್ಪೆಂಡ್