ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ರಾಜ್ಯದ 80ಕ್ಕೂ ಅಧಿಕ ಎ ದರ್ಜೆ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿವೆ. ಒಂದು ವಾರದಲ್ಲಿ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ಮಾಡುವ ಇಚ್ಛೆ ಸರ್ಕಾರಕ್ಕಿದೆ. ಅನೇಕರು ಅದನ್ನು ಪ್ರಾಧಿಕಾರ ಮಾಡುವ ಕಲ್ಪನೆ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನವನ್ನು ಶೀಘ್ರವಾಗಿ ತಿಳಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಎಸ್‍ಎಸ್‍ಎಲ್‍ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಳ್ಪ ಗ್ರಾಮದ ಅನುಷ್ನನ್ನು ಸಮ್ಮಾನಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇವಸ್ಥಾನಗಳಲ್ಲಿ ಸೇವೆಗಳನ್ನು ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ, ಸಾಮಾನ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲು ಅವಕಾಶ ಮಾಡಲು ಶೀಘ್ರ ಕ್ರಮಕೈಗೊಳ್ಳಲಾಗುವುದು. ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕವಾಗಿ ಆಚರಣೆ ಮಾಡಲು ಅವಕಾಶವಿಲ್ಲ. ಮನೆಯಲ್ಲಿ ಮಾಡಲು ಅಡ್ಡಿಯಿಲ್ಲ ಎಂದರು.
ಕೊರೊನಾ ಚಿಕಿತ್ಸೆ ಸಂಬಂಧ ಎಲ್ಲರಿಗೂ ಉಚಿತ ಚಿಕಿತ್ಸೆಗೆ ಸೂಚಿಸಲಾಗಿದ್ದು, ಖಾಸಗಿ ಆಸ್ಪತ್ರೆಗಳಿಗೆ ನೂರು ಕಿಟ್‍ಗಳನ್ನು ಕೊಟ್ಟು ಉಚಿತ ಚಿಕಿತ್ಸೆ ಕೊಡಿಸಲು ಸೂಚಿಸಲಾಗಿದೆ. ಪಾಸಿಟಿವ್ ಬಂದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಚಿಕಿತ್ಸೆ ಕೊಡಲಾಗುತ್ತದೆ. ಸಾರ್ವಜನಿಕರು ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳುವಂತೆ ವಿನಂತಿಸಿದರು.
ಅಕ್ಷರ ದಾಸೋಹ ಸಿಬ್ಬಂದಿಗೆ ವೇತನ ಕೊಡದೇ ಇರುವ ಬಗ್ಗೆ ಮಾಹಿತಿ ಇಲ್ಲ. ಈ ಸಂದರ್ಭದಲ್ಲಿ ಸಿಬ್ಬಂದಿಗೆ ವೇತನ ಕೊಟ್ಟಿಲ್ಲ ಎಂದು ತಿಳಿದುಬಂದಲ್ಲಿ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಚರ್ಚಿಸಿ ವೇತನ ಪಾವತಿಸುವಂತೆ ವಿನಂತಿಸಲಾಗುವುದು ಎಂದರು.
ಬೆಂಗಳೂರು ಘಟನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ವ್ಯಕ್ತಿ, ಸಂಘಟನೆಯನ್ನು ಸರ್ಕಾರ ಸಹಿಸುವುದಿಲ್ಲ. ಕಾನೂನು ಕೈಗೆತ್ತಿಕೊಂಡು ಬೆಂಕಿ ಹಾಕುವುದು,ಕಲ್ಲು ತೂರಾಟ, ಪತ್ರಕರ್ತರಿಗೆ, ಪೊಲೀಸರಿಗೆ ಹಲ್ಲೆ ಮಾಡುವವರ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.