ಮಂಗಳೂರು: ಕೇಂದ್ರ ಸರ್ಕಾರವು ಖೇಲೋ ಇಂಡಿಯಾ ಯೋಜನೆಯ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಇದರಿಂದ ಭವಿಷ್ಯದಲ್ಲಿ ಮತ್ತಷ್ಟು ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಸಹಕಾರಿಯಾಗಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರೂ ಯುವ ಕೇಂದ್ರ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಮಂಗಳಾ ಕ್ರೀಡಾಂಗಣ ವೇದಿಕೆಯಲ್ಲಿ ನಡೆದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಜನ್ಮ ದಿನಾಚರಣೆಯ ಸವಿನೆನಪು ರಾಷ್ಟ್ರೀಯ ಕ್ರೀಡಾ ದಿನಾಚರಣೆ-2020 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಒಲಿಂಪಿಕ್ ಕ್ರೀಡೆಯಲ್ಲಿ 3 ಬಾರಿ ಪದಕ ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಹಾಕಿ ಮಾಂತ್ರಿಕ ಧ್ಯಾನ್ ಚಂದ್ರದ್ದು ಕ್ರೀಡಾಕ್ಷೇತ್ರಕ್ಕೆ ಕೊಡುಗೆ ಅಪಾರ ಎಂದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳು, ಯುವಜನತೆ ಸೇರಿದಂತೆ ಮೊಬೈಲ್, ಸಾಮಾಜಿಕ ಜಾಲತಾಣಗಳಲ್ಲಿ ಆನ್‍ಲೈನ್ ಆಟಗಳಿಗೆ ಹೆಚ್ಚಿನ ಒಲವು ತೋರುತ್ತಿದ್ದು, ಕ್ರೀಡಾಂಗಣದಲ್ಲಿ ಆಡುವವರ ಸಂಖ್ಯೆ ವಿರಳವಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ವಿವಿಧ ಕ್ರೀಡಾ ಸಂಘಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಿ ಉತ್ತೇಜನ ನೀಡುತ್ತಿರುವುದಕ್ಕೆ ಅಭಿನಂದನೆ. ಸ್ಮಾರ್ಟ್ ಸಿಟಿ ಯೋಜನೆ ಮೂಲಕ ವ್ಯವಸ್ಥಿತವಾದ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದ್ದು, ಈ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.
ಯುವ ಚೈತನ್ಯ ಯೋಜನೆಯಡಿ ಮಂಗಳೂರು ತಾಲೂಕಿನ 8 ತಂಡಗಳಿಗೆ ಕ್ರೀಡಾ ಕಿಟ್ ಮತ್ತು ಫಿಟ್ ಇಂಡಿಯಾ ಪ್ರಮಾಣ ಪತ್ರ ವಿತರಿಸಲಾಯಿತು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ನೆಹರು ಯುವ ಕೇಂದ್ರದ ಸಮನ್ವಯ ಅಧಿಕಾರಿ ರಘುವೀರ್ ಸೂಟರ್‍ಪೇಟೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.