ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಈ ಸಲವೂ ಜಿಲ್ಲೆಯ ಹೊರಗಿನವರೇ ಉಸ್ತುವಾರಿ ಸಚಿವರಾಗಲಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಎರಡು ಜಿಲ್ಲೆಗಳಲ್ಲಿ ಹೊರ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಿದ್ದರು. ಈ ಬಾರಿಯೂ ಹೊರ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಲಿದ್ದು, ಯಾರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ವೇಳೆ ಸುನಿಲ್ ಕುಮಾರ್ ಉಸ್ತುವಾರಿ ಸಚಿವರಾಗಿದ್ದರು. ಈ ಇಬ್ಬರು ಕೂಡ ಉಡುಪಿ ಜಿಲ್ಲೆಯವರಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಹೊರಗಿನವರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಏಳರಲ್ಲಿ ಬಿಜೆಪಿ ಶಾಸಕರಿದ್ದರೂ ಬಿಜೆಪಿ ಸರಕಾರದ ಅವಧಿಯಲ್ಲಿ ಹೊರಗಿನ ಜಿಲ್ಲೆಯವರಿಗೆ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿತ್ತು.
ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಆರು ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದ್ದು, ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕ್ಷೇತ್ರದಲ್ಲಿ ಐದು ಬಾರಿ ಗೆದ್ದ, ಈ ಹಿಂದೆ ಸಚಿವರಾಗಿದ್ದ ಯು.ಟಿ. ಖಾದರ್ ಈ ಬಾರಿ ಸಚಿವರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ರಾಜಕೀಯ ಬೆಳವಣಿಗೆಯಲ್ಲಿ ಖಾದರ್ ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೊಬ್ಬ ಕಾಂಗ್ರೆಸ್ ಶಾಸಕ ಪುತ್ತೂರು ಕ್ಷೇತ್ರದ ಅಶೋಕ್ ಕುಮಾರ್ ಅವರು ಮೊದಲ ಬಾರಿ ಚುನಾಯಿತರಾಗಿದ್ದಾರೆ. ಆದ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಹೊರ ಜಿಲ್ಲೆಯವರು ಬರಲಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಬಸವರಾಜ ಬೊಮ್ಮಾಯಿ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ವೇಳೆ ಅಂಗಾರ ಉಸ್ತುವಾರಿ ಸಚಿವರಾಗಿದ್ದರು. ಈ ಇಬ್ಬರು ಕೂಡ ಉಡುಪಿ ಜಿಲ್ಲೆಗೆ ಹೊರಗಿನವರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರದಲ್ಲಿ ಐದರಲ್ಲೂ ಬಿಜೆಪಿ ಶಾಸಕರಿದ್ದರೂ ಬಿಜೆಪಿ ಸರಕಾರದ ಅವಧಿಯಲ್ಲಿ ಹೊರಗಿನ ಜಿಲ್ಲೆಯವರಿಗೆ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿತ್ತು.
ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರದಲ್ಲಿ ಐದರಲ್ಲಿಯೂ ಬಿಜೆಪಿ ಜಯಗಳಿಸಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಇಲ್ಲಿ ಶೂನ್ಯ ಸಂಪಾದನೆ ಮಾಡಿದೆ. ಆದ ಕಾರಣ ಉಡುಪಿ ಜಿಲ್ಲೆಯ ಯಾರೂ ಕೂಡ ಸಚಿವರಾಗಿಲ್ಲ. ಈ ಕಾರಣದಿಂದ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಹೊರ ಜಿಲ್ಲೆಯವರು ಬರಲಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಹೊರ ಜಿಲ್ಲೆಯ ಸಚಿವರು ಉಸ್ತುವಾರಿ ಸಚಿವರಾಗಿ ಬರಲಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನರಿಗೆ ಸಚಿವರು ಲಭ್ಯವಾಗುವುದು ಕಷ್ಟಕರವಾಗಲಿದೆ. ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಗಮನ ಹರಿಸಬೇಕಾಗಿದೆ. ಹೊರ ಜಿಲ್ಲೆಯ ಸಚಿವರುಗಳಿಗೆ ತಮ್ಮ ಜಿಲ್ಲೆಯ ಮತ್ತು ಕ್ಷೇತ್ರದ ಬಗ್ಗೆ ಮೋಹ ಇರುವುದರಿಂದ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೂ ತೊಂದರೆಯಾಗಲಿದೆ.
ಕಳೆದ ಬಾರಿ ಬಿಜೆಪಿಯ ಶಾಸಕರು, ಸಚಿವರು ಇದ್ದರೂ ಈ ಎರಡು ಜಿಲ್ಲೆಗಳು ಬಿಜೆಪಿ ಸರಕಾರದ ಅವಧಿಯಲ್ಲಿ ಹೊರ ಜಿಲ್ಲೆಯ ಸಚಿವರನ್ನು ಕಾಣಬೇಕಾಯಿತು. ಈ ಬಾರಿ ಕಾಂಗ್ರೆಸ್ ಸರಕಾರ ಇದ್ದು, ಈ ಎರಡು ಜಿಲ್ಲೆಯಿಂದ ಸಚಿವರೇ ಇಲ್ಲವಾಗಿದ್ದಾರೆ. ಆದ್ದರಿಂದ ಈ ಬಾರಿಯು ಹೊರ ಜಿಲ್ಲೆಯ ಸಚಿವರು ಉಸ್ತುವಾರಿ ಸಚಿವರಾಗಲಿದ್ದು, ಈ ಎರಡು ಜಿಲ್ಲೆಗೆ ಯಾರು ಉಸ್ತುವಾರಿ ಸಚಿವರಾಗಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.
ಇದನ್ನೂ ಓದಿ: ಮೇಲ್ಮನೆ ಸದಸ್ಯರಾದ ಗೋವಿಂದ ರಾಜು, ನಜೀರ್ ಅಹಮ್ಮದ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ