ಮಂಗಳೂರು: ನಗರದಾದ್ಯಂತ ಮಾದಕ ವಸ್ತು ಎಂಡಿಎಂಎ (Methylete dloxy methamphetamine) ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರದ ಮೊಹಮ್ಮದ್ ನಿಯಾಜ್ (28), ತಲಪಾಡಿಯ ನಿಶಾದ್ (31) ಹಾಗೂ ಪಡೀಲ್ ಕಣ್ಣೂರಿನ ಮಹಮ್ಮದ್ ರಝೀನ್ (24) ಬಂಧಿತರು.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, "ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಎರಡು ಕಾರಿನಲ್ಲಿ ಬಂದು ಎಂಡಿಎಂಎಯನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ" ಎಂದು ತಿಳಿಸಿದರು.
ಬಂಧಿತ ಆರೋಪಿಗಳಿಂದ ಒಟ್ಟು 180 ಗ್ರಾಂ ತೂಕದ 9 ಲಕ್ಷ ರೂ ಮೌಲ್ಯದ ಎಂಡಿಎಂಎ, 2 ಮಾರುತಿ ಸ್ವಿಫ್ಟ್ ಕಾರು, 4 ಮೊಬೈಲ್ ಫೋನ್ ಹಾಗೂ 22,050 ರೂ.ನಗದು, ಪಿಸ್ತೂಲ್, 1 ಸಜೀವ ಗುಂಡು , 2 ಡ್ರಾಗನ್ ಚೂರಿಗಳು ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ರೂ 27,62,000 ಎಂದು ಅಂದಾಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ: ಮಂಗಳೂರು ಸಿಸಿಬಿ ಕಾರ್ಯಾಚರಣೆ: ಎಂಡಿಎಂಎ ಸಿಂಥೆಟಿಕ್ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರು ಸೆರೆ
ಮುಂದುವರೆದ ಆರೋಪಿಗಳ ಪತ್ತೆ ಕಾರ್ಯ: ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿದೆ. ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಸ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಎಎಸ್‌ಐಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಳೆ ಹಲ್ಲೆ ನಡೆಸಿದ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟ 2 ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ 2 ದರೋಡೆ ಪ್ರಕರಣ ದಾಖಲಾಗಿರುತ್ತದೆ.
ಅಲ್ಲದೇ ಕಂಕನಾಡಿ ನಗರ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ಸೇವನೆಗೆ ಸಂಬಂಧಪಟ್ಟ 2 ಪ್ರಕರಣಗಳು ಹೀಗೆ ಒಟ್ಟು 10 ಪ್ರಕರಣಗಳು ದಾಖಲಾಗಿರುತ್ತದೆ. ಈತನು ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದು, ವಾರಂಟ್ ಜಾರಿಯಾಗಿರುತ್ತದೆ. ಇನ್ನೋರ್ವ ಆರೋಪಿ ಮೊಹಮ್ಮದ್ ರಝೀನ್ ಎಂಬಾತನ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್‌ಐ ರಾಜೇಂದ್ರ ಬಿ, ಸುದೀಪ್.ಎಂ.ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು ಎಂದು ಅವರು ತಿಳಿಸಿದರು.
ಡ್ರಗ್ಸ್ ಲೇಪಿತ ಚಾಕೊಲೇಟ್ ಪ್ರಕರಣ- ಮುಂದುವರಿದ ಶೋಧ: ಮಂಗಳೂರಿನಲ್ಲಿ ಬುಧವಾರ ಪತ್ತೆ ಹಚ್ಚಲಾದ ಡ್ರಗ್ಸ್ ಲೇಪಿತ ಚಾಕೊಲೇಟ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಈ ಪ್ರಕರಣ ಬೆಳಕಿಗೆ ಬಂದ ಬಳಿಕ 100ಕ್ಕೂ ಅಧಿಕ ಅಂಗಡಿಗಳನ್ನು ಪರಿಶೀಲನೆ ನಡೆಸಲಾಗಿದೆ. ಆರೋಪಿಗಳು ಉತ್ತರಪ್ರದೇಶದಿಂದ ಚಾಕೊಲೇಟ್ ತರಿಸಿ ಮಾರಾಟ ಮಾಡುತ್ತಿದ್ದರು ಎಂದು ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು.
ಇದನ್ನೂ ಓದಿ: ಮಂಗಳೂರಿನಲ್ಲಿ 100 ಕೆಜಿ ಡ್ರಗ್ಸ್ ಲೇಪಿತ ಚಾಕೊಲೇಟ್ ವಶ