ಮಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ಮತ್ತು ಎಫ್ಟಿಎಸ್ಸಿ-1(ಪೊಕ್ಸೊ) ನ್ಯಾಯಾಲಯವು ಪೋಕ್ಸೊ ಸೇರಿ ವಿವಿಧ ಕಾಯಿದೆಗಳಡಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ನಗರದ ಬಜಪೆ ನಿವಾಸಿ ಅಬ್ದುಲ್ ಹಮೀದ್ (50) ಶಿಕ್ಷೆಗೊಳಗಾದ ಅಪರಾಧಿ.
ಅಪರಾಧಿ ಅಬ್ದುಲ್ ಹಮೀದ್ 2021ರ ಜೂ.3ರಂದು ನೆರೆಮನೆ ಬಾಲಕಿ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಿದ್ದ. ಲೈಂಗಿಕ ಕಿರುಕುಳ ನೀಡಿದ ಬಳಿಕ ಈತ ಬಾಲಕಿಗೆ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಂಬಂಧ ತನಿಖೆ ನಡೆಸಿದ ಇನ್ಸ್ಪೆಕ್ಟರ್ ರಾಘವೇಂದ್ರ ನಾಯ್ಕ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಪ್ರಕರಣ ಸಂಬಂಧ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಅಪರಾಧಿ ಅಬ್ದುಲ್ ಹಮೀದ್ಗೆ ಪೋಕ್ಸೊ ಕಾಯ್ದೆಯ ಕಲಂ 8ರಡಿ ಮೂರು ವರ್ಷ ಸಾದಾ ಸಜೆ ಮತ್ತು ಐದು ಸಾವಿರ ರೂ. ದಂಡ, ಐಪಿಸಿ ಸೆಕ್ಷನ್ 448ರಡಿ 6 ತಿಂಗಳ ಸಾದಾ ಸಜೆ, ಕಲಂ 354ರಡಿ 1 ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ, ಐಪಿಸಿ ಸೆಕ್ಷನ್ 323ರಡಿ 6 ತಿಂಗಳ ಸಾದಾ ಸಜೆ ಮತ್ತು 1,000 ರೂ. ದಂಡ, ಐಪಿಸಿ ಸೆಕ್ಷನ್ 506ರಡಿ 1 ವರ್ಷ ಸಾದಾ ಸಜೆ ಹಾಗೂ 1,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೇ ಸಂತ್ರಸ್ತ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ವಾದ ಮಂಡಿಸಿದ್ದರು.
ಇದನ್ನೂ ಓದಿ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ.. ಪ್ರಾಂಶುಪಾಲ ಪೊಲೀಸರ ವಶಕ್ಕೆ