ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳನ್ನು ಪೂರ್ಣಗೊಳಿಸಿ: ಅಧ್ಯಕ್ಷ ಗುರುಮೂರ್ತಿ ಸೂಚನೆ - ಅಧ್ಯಕ್ಷ ಗುರುಮೂರ್ತಿ ಸೂಚನೆ
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಈ ವೇಳೆ ಮಂಡಳಿಯ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಮಂಡಳಿ ಅಧ್ಯಕ್ಷ ಗುರುಮೂರ್ತಿ ಅಧಿಕಾರಿಗಳಿಗೆ ಸೂಚಸಿದರು.

ಮಂಗಳೂರು: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ದ.ಕ.ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ನೂರು ಪ್ರತಿಶತ ಪೂರ್ಣಗೊಳಿಸಬೇಕು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಜನವರಿ, ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಪ್ರಸ್ತುತ ಅನುಮೋದನೆಗೆ ಸಲ್ಲಿಸಿರುವ 80 ಕಾಮಗಾರಿಗಳನ್ನು ಮಾರ್ಚ್ ಎರಡನೇ ವಾರದೊಳಗಾಗಿ ಪೂರ್ಣಗೊಳಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಒಟ್ಟಾರೆ 94 ಕಾಮಗಾರಿಗಳನ್ನು 8.07 ಕೋಟಿ ರೂ. ಗಳ ಮೊತ್ತದಲ್ಲಿ ಕೈಗೊಳ್ಳಲಾಗಿದೆ. ಈ ಆರ್ಥಿಕ ವರ್ಷದಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ಯಾವುದೇ ಕಾರಣಕ್ಕೂ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು ಎಂದರು.
ಸಭೆಯಲ್ಲಿ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಮಂಡಳಿ ಸದಸ್ಯ ರಾಮ ಅಮಿನ್ ಪಚ್ಚಾಡಿ ಹಾಗೂ ಮಂಡಳಿಯ ಕಾರ್ಯದರ್ಶಿ ಕೆ.ಎಸ್. ಮಣಿ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಕರ್ನಾಟಕ ರೂರಲ್ ಇನ್ಫಾಸ್ಟ್ರಕ್ಚರ್ ಡೆವಲಪ್‍ಮೆಂಟ್ ಲಿಮಿಟೆಡ್, ಮಹಾನಗರ ಪಾಲಿಕೆ ಅಭಿಯಂತರು, ಮಂಗಳೂರು ಹಾಗೂ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಹಾಗೂ ಜಿಲ್ಲಾ ಮಟ್ಟ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.