ಮಂಗಳೂರು : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಜಾಲ್ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27) ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್ ಇರ್ಫಾನ್ (26) ಬಂಧಿತರು.
ಜನವರಿ 1 ರಂದು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ರೈಲ್ವೆ ಬ್ರಿಡ್ಜ್ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದಿತ್ತು. ಸ್ಥಳಕ್ಕೆ ಪೊಲೀಸ್ ನಿರೀಕ್ಷಕರು, ಪಿಎಸ್ಐ ಹಾಗೂ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 19 ಗ್ರಾಂ ಮಾದಕ ಮಾತ್ರೆ ಹಾಗು ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ರೂ. 1,92,800 ರೂ.ಗಳು ಎಂದು ಅಂದಾಜಿಸಲಾಗಿದೆ.
ಆರೋಪಿ ಜುಟ್ಟು ಅಶ್ಪಾಕ್ ಮೇಲೆ ಮಂಗಳೂರು ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ದರೋಡೆ ಸುಲಿಗೆ ದೊಂಬಿಯಂತಹ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ.
ಮತ್ತೊಬ್ಬ ಆರೋಪಿ ಉಮರ್ ಫಾರೂಕ್ ಇರ್ಫಾನ್ ನ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ, ಕೊಣಾಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಶಿವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಆರೋಪಿತನ ವಿರುದ್ಧ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನದಂತಹ ಒಟ್ಟು 25 ಪ್ರಕರಣಗಳು ದಾಖಲಾಗಿವೆ.
ಪ್ರತ್ಯೇಕ ಪ್ರಕರಣ- ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲರ್ ಬಂಧನ : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಾದಕ ಪದಾರ್ಥ ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳ ತಂಡ ಬಂಧಿಸಿತ್ತು. ದೊಮ್ಮಲೂರಿನ ನಿವಾಸಿಯಾಗಿರುವ ಭರತ್ ಬಂಧಿತ ಆರೋಪಿಯಾಗಿದ್ದು, ಈತನಿಂದ ಒಟ್ಟು 8 ಲಕ್ಷ 40 ಸಾವಿರ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿತ್ತು.
ಇದನ್ನೂ ಓದಿ : ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ