ದಕ್ಷಿಣಕನ್ನಡ: ಕಳೆದೊಂದು ವಾರದಿಂದ ರಾಜ್ಯಾದ್ಯಂತ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಸಂಬಂಧ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿದೆ. ಬೆಂಗಳೂರು, ರಾಮನಗರ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡದಲ್ಲಿ ಇಂದು 2 ಪ್ರಕರಣ: ಜಿಲ್ಲೆಯಲ್ಲಿ ಮತ್ತೆ ಎರಡು ಕೊರೊನಾ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ. ನಿನ್ನೆ (ಬುಧವಾರ) 1 ಪ್ರಕರಣ ದೃಢಪಟ್ಟಿತ್ತು. ಉಡುಪಿ ಜಿಲ್ಲೆಯ ವೃದ್ಧರೊಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಸುಳ್ಯದ 83 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಉತ್ತರ ಭಾರತದ 40 ವರ್ಷದ ಕೂಲಿ ಕಾರ್ಮಿಕ ಉಸಿರಾಟದ ತೊಂದರೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೂ ಸೋಂಕು ತಗುಲಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಬುಧವಾರ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಜೆಎನ್.1 ಪ್ರಕರಣಗಳು ಪತ್ತೆಯಾಗಿರುವ ಬೆನ್ನಲ್ಲೇ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಬುಧವಾರ ಕೊರೊನಾ ಟೆಸ್ಟ್ ಮಾಡಿಸಿದ್ದ 51 ಜನರ ಪೈಕಿ ನಾಲ್ವರಲ್ಲಿ ಕೋವಿಡ್ ಕಂಡುಬಂದಿದೆ.
ಇದೀಗ ಇವರ ನೇರ ಸಂಪರ್ಕದಲ್ಲಿದ್ದ ಇನ್ನೂ ಹಲವರಿಗೆ ಸೋಂಕು ತಗುಲಿರುವ ಭೀತಿ ಶುರುವಾಗಿದೆ. ಪಾಸಿಟಿವ್ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದವರಿಗೆ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಈ ಸಂಬಂಧ ಜಿಲ್ಲಾಸ್ಪತ್ರೆಯಲ್ಲಿ ಬೆಳಿಗ್ಗೆಯಿಂದ ಟೆಸ್ಟ್ ಮಾಡಲಾಗುತ್ತಿದೆ. ಜ್ವರ, ಕೆಮ್ಮು, ನೆಗಡಿ ಮೊದಲಾದ ಲಕ್ಷಣಗಳು ಕಂಡುಬರುವ ಜನರನ್ನು ತಪಾಸನೆ ನಡೆಸಲಾಗುತ್ತಿದೆ.
ಚಳಿಗಾಲ ಆಗಿರುವುದರಿಂದ ವೈರಸ್ ಸೋಂಕು ಹರಡುವ ವೇಗ ಹೆಚ್ಚಳವಾಗಿದೆ. ಆದರೆ ಇದನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಇದಕ್ಕಾಗಿ ವಿಶೇಷ ವಾರ್ಡ್, ಆಕ್ಸಿಜನ್ ಬೆಡ್ ಹಾಗೂ ವೆಂಟಿಲೇಟರ್ ವ್ಯವಸ್ಥೆಯನ್ನು ಆಸ್ಪತ್ರೆಗಳಲ್ಲಿ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ 6 ಕೊರೊನಾ ಪ್ರಕರಣ ಪತ್ತೆ: ಆರೋಗ್ಯಾಧಿಕಾರಿ ಮಾಹಿತಿ