ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಶಾಸಕ ಯು.ಟಿ. ಖಾದರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಯು.ಟಿ. ಖಾದರ್, ನಾನು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿ ಜೊತೆಗಿನ ಸಭೆ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿವೆ. ಸಮಸ್ಯೆ ಉಂಟಾದರೆ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಐವನ್ ಡಿಸೋಜ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೆಮ್ಮು, ಜ್ವರ ಮುಂತಾದ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಐವನ್ ಡಿಸೋಜ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.