ಸುಳ್ಯ: ಡಿಸೆಂಬರ್ 22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆಯಬೇಕಿದ್ದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಕರಾವಳಿಯಲ್ಲಿ ನಿಷೇಧಾಜ್ಞೆ ಇದ್ದ ಹಿನ್ನಲೆಯಲ್ಲಿ ಜನವರಿ 5ಕ್ಕೆ ಮುಂದೂಡಲಾಗಿತ್ತು. ಈ ಕುರಿತು ಗ್ರಾಮವಾಸ್ತವ್ಯ ಸಿದ್ಧತೆಯ ಪೂರ್ವಭಾವಿ ಸಭೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ. ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸುಳ್ಯ, ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ಮಡಪ್ಪಾಡಿ ಗ್ರಾಮಸ್ಥರ ಸಹಕಾರದಲ್ಲಿ ಜನವರಿ 5 ರಂದು ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ, ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರದ ಸಿದ್ಧತೆ ಬಗ್ಗೆ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್. ಭವಾನಿ ಶಂಕರ ಹಾಗೂ ಪತ್ರಕರ್ತರ ತಂಡ ಮಡಪ್ಪಾಡಿಗೆ ಭೇಟಿ ನೀಡಿ ಪರಿಶೀಲಿಸಿದೆ.
ರಾಜ್ಯ ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗವಹಿಸುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಇಒ ಭವಾನಿಶಂಕರ ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ ಸೇರಿದಂತೆ ಇತರರು ಇದ್ದರು.