ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ವರ ಬಂದರೂ ಕೊರೊನಾ ಪರೀಕ್ಷೆ ನಡೆಸುವಂತೆ ಶಿಕ್ಷಕರು ಒತ್ತಡ ಹೇರುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದನ್ನು ನಿಲ್ಲಿಸುವಂತೆ ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕೊರೊನಾ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಕೀಯ ಕಾಲೇಜುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ರೋಗದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಈಗಾಗಲೇ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿದೆ. ಪರೀಕ್ಷೆ ಹತ್ತಿರ ಇರುವುದರಿಂದ ಯಾವುದೇ ಅನಗತ್ಯ ತಪಾಸಣೆಯಿಂದ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸದಂತೆ ಅವರು ಹೇಳಿದ್ದಾರೆ.
ವಿದೇಶದಿಂದ ಪ್ರಯಾಣಿಕರು ಆಗಮಿಸುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಈಗಾಗಲೇ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಸಂಶಯಾಸ್ಪದ ರೋಗಿಗಳನ್ನು ನೇರವಾಗಿ ಅಲ್ಲಿಂದಲೇ ಅಂಬ್ಯುಲೆನ್ಸ್ ಮೂಲಕ ವೆನ್‍ಲಾಕ್ ಆಸ್ಪತ್ರೆಗೆ ಕಳುಹಿಸಿಕೊಡಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕೊರೊನಾ ತಪಾಸಣೆ ಹಾಗೂ ಚಿಕಿತ್ಸೆಯ ಬಗ್ಗೆ ಆಸ್ಪತ್ರೆ ಹಾಗೂ ವೈದ್ಯರು ಸಮಾನವಾದ ಚಿಕಿತ್ಸೆ ಹಾಗೂ ಪರಿಶೀಲನೆ ನಡೆಸಲು ತರಭೇತಿ ನೀಡುವಂತೆ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಗೆ ನಿರ್ದೇಶಿಸಿದ್ದಾರೆ. ಅಲ್ಲದೇ, ಜಿಲ್ಲೆಯ ಎಲ್ಲಾ ಆಸ್ಪತ್ರೆಗಳು ವಿವಿಧ ಜ್ವರಗಳ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆಗೆ ಪ್ರತೀ ನಿತ್ಯ ವರದಿ ನೀಡಬೇಕೆಂದು ಸೂಚಿಸಿದ್ದಾರೆ.
ನವಮಂಗಳೂರು ಬಂದರಿಗೆ ಪ್ರವಾಸಿ ಹಡಗುಗಳಲ್ಲಿ ಆಗಮಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲು ಎನ್.ಎಂ.ಪಿ.ಟಿ. ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಮುಖ ಕವಚ (ಮಾಸ್ಕ್) ಕೊರತೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ. ಇವುಗಳ ಕೊರತೆಯಾಗದಂತೆ ಗಮನಹರಿಸಲು ಅವರು ಔಷಧ ನಿಯಂತ್ರಕರಿಗೆ ಸೂಚಿಸಿದ್ದಾರೆ.