ಮಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ ಬಂಧಿತ ಆರೋಪಿ.
ಈತ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಈ ಹಿಂದೆ ಬಂಧಿತನಾಗಿದ್ದ. ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆ ಸಮಯದಲ್ಲಿ ಹಾಜರಾಗದೇ ತಲೆಮರೆಸಿಕೊಂಡಿದ್ದ.
ವಾರಂಟ್ ಹಿನ್ನೆಲೆ ಮಂಗಳೂರು ಸಿಸಿಬಿ ಪೊಲೀಸರು ಆತನನ್ನು ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯ ವಿರುದ್ದ ಮಂಗಳೂರು ನಗರದ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಕಂಕನಾಡಿ ನಗರ, ಉಳ್ಳಾಲ, ಪಣಂಬೂರು, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ 15 ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ತಿಂಗಳಿನಿಂದ ತಲೆಮರೆಸಿಕೊಂಡಿದ್ದ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದನ್ನು ಓದಿ:ಅನುಮಾನದ ಭೂತಕ್ಕೆ ಗೃಹಿಣಿ ಬಲಿ.. ಪತ್ನಿಯ ಕತ್ತು ಸೀಳಿ ಕೊಲೆಮಾಡಿದ ಪತಿ