ಮಂಗಳೂರು: ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡಲಾಗಿದೆ. ಇಂತಹ ಪ್ರಕರಣಗಳ ಬಗ್ಗೆ ಶಾಸಕರು ಹಸ್ತಕ್ಷೇಪದ ಬಗ್ಗೆ ತನಗೇನು ಗೊತ್ತಿಲ್ಲ. ಸತ್ಯಾಂಶವಿದ್ದಲ್ಲಿ ಒಪ್ಪಿಕೊಳ್ಳುತ್ತೇವೆ ಎಂದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರುಳುಗಾರಿಕೆ ತಡೆಯಲು ಈಗಾಗಲೇ ರಾಜ್ಯಮಟ್ಟದಲ್ಲಿ ಗಣಿ ಸಚಿವರೊಂದಿಗೆ ಸಭೆ ನಡೆದಿದೆ. ಅದಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲೂ ಗಣಿಗಾರಿಕೆಯನ್ನು ಕಾನೂನು ಪ್ರಕಾರ ಮಾಡಬೇಕು. ಅದರ ಬಗ್ಗೆಯೂ ಸಭೆ ನಡೆದಿದೆ. ಈ ಸಂಬಂಧ 32 ಮಂದಿ ಗುತ್ತಿಗೆದಾರರಿಗೆ ಕೋರ್ಟಿನಿಂದ ಆದೇಶ ಬಂದಿದ್ದು, ಅವರಿಗೆ ಮರಳುಗಾರಿಕೆ ನಡೆಸಲು ಸರ್ಕಾರ ಅನುಮತಿ ನೀಡಿದೆ ಎಂದರು.
ರಾಜ್ಯದಲ್ಲಿ 6.25 ಲಕ್ಷ ಮಂದಿ ಲಸಿಕೆ ಪಡೆದಿದ್ದಾರೆ. ಅದೇ ರೀತಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 22,915 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಶೇ. 88 ರಷ್ಟು ಮೊದಲ ಡೋಸ್ ಹಾಗೂ ಶೇ.51 ರಷ್ಟು ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಜಗತ್ತಿನಲ್ಲಿಯೇ ಭಾರತ ನಾಗರಿಕರಿಗೆ ಅತ್ಯಂತ ಯಶಸ್ವಿಯಾಗಿ ವ್ಯಾಕ್ಸಿನ್ ನೀಡಿದೆ ಎಂದರು.
ಕೋವಿಡ್ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಅಗತ್ಯ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲು ಜಿಲ್ಲಾಡಳಿತ ತಯಾರಿ ನಡೆಸಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸದಿಂದ ನಾವು ಗುರಿ ಮುಟ್ಟಲು ಸಾಧ್ಯವಾಯಿತು. ಅದೇ ರೀತಿ ಯಾರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೋ ಅಂತಹವರ ಮನವೊಲಿಸುವ ಕಾರ್ಯ ಬೂತ್ ಮಟ್ಟದಿಂದಲೇ ನಡೆಯುತ್ತಿದೆ. ಇನ್ನೇನು ಪ್ರಾಥಮಿಕ ಶಾಲೆ ಆರಂಭವಾಗುತ್ತಿದ್ದು, ಎಲ್ಲಾ ಶಾಲೆಗಳಲ್ಲಿಯೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.
ಇದನ್ನೂ ಓದಿ: ಕಾಗದದಲ್ಲಿ ಮನೆ ಮಂಜೂರಾತಿ ಮಾಡಿದ್ರೆ ಅದೇನು ದೊಡ್ಡ ಸಾಧನೆಯಲ್ಲ : ಸಿದ್ದರಾಮಯ್ಯಗೆ ಸಿಎಂ ತಿರುಗೇಟು