ಪುತ್ತೂರು(ಮಂಗಳೂರು) : ಲಾಕ್‌ಡೌನ್‌ನಿಂದಾಗಿ ಜಿಲ್ಲೆಯಲ್ಲಿ ಬೀಡಿ ಕಾರ್ಮಿಕರು ಸಮಸ್ಯೆಗೀಡಾಗಿದ್ದಾರೆ. ಈಗಾಗಲೇ ತಯಾರಿಸಿದ ಬೀಡಿಗಳಲ್ಲಿ ಶೇ.50 ರಷ್ಟನ್ನು ತೆಗೆದುಕೊಳ್ಳುವುದರೊಂದಿಗೆ ಅವರಿಗೆ ಬೋನಸ್ ನೀಡಬೇಕು ಎಂಬ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಅವರು ಭಾನುವಾರ ಇಲ್ಲಿಯ ಎಪಿಎಂಸಿ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಗಾಗಲೇ ಬಿಪಿಎಲ್, ಎಪಿಎಲ್ ಕಾರ್ಡ್ದಾರರಿಗೆ ವಿತರಿಸುವ ರೇಷನ್‌ನಲ್ಲಿ ಹೆಚ್ಚಳ ಮಾಡಲಾಗಿದ್ದು, ಅಕ್ಕಿ ಜತೆ ಗೋಧಿ, ಬೇಳೆಗಳನ್ನು ಸರಿಯಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಎಪಿಎಲ್, ಬಿಪಿಎಲ್ ಇಲ್ಲರದವರಿಗೂ ರೇಷನ್ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ನಮ್ಮ ಜಿಲ್ಲೆಯಲ್ಲಿ ಈಗಾಗಲೇ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದ್ದು, ಹೊರ ರಾಜ್ಯಗಳಿಂದ ಪ್ರವೇಶಿಸುವ ಸುಮಾರು 19 ಗಡಿಗಳನ್ನು ಬಂದ್ ಮಾಡುವ ಮೂಲಕ ನಿಯಂತ್ರಣ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಆಸ್ಪತ್ರೆಗಳ ತೆರೆಯುವಿಕೆ, ಆಶಾ ಕಾರ್ಯಕರ್ತೆಯರಿಂದ ಮನೆ ಮನೆ ಸರ್ವೆ ಕಾರ್ಯ, ಸಂಶಯ ಪ್ರದೇಶಗಳ ಲಾಕ್‌ಡೌನ್, ವಿದೇಶದಿಂದ ಆಗಮಿಸುವವರ ಮೇಲೆ ಹೆಚ್ಚಿನ ನಿಗಾವಹಿಸಿ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸುವ ಕಾರ್ಯ ಮಾಡಲಾಗಿದ್ದು, ಒಟ್ಟಾರೆಯಾಗಿ ಜಿಲ್ಲೆಯ ಜನತೆಯ ಹಿತದೃಷ್ಟಿಯಿಂದ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ವೈರಸ್ ಹರಡುವಿಕೆಯನ್ನು ಯಶಸ್ವಿಯಾಗಿ ತಡೆಗಟ್ಟಲಾಗುತ್ತಿದೆ ಎಂದರು.